ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕನ್ನಡದ ಮೂವರು ಕ್ರಿಕೆಟ್ ದಿಗ್ಗಜರಿಗೆ ಆಹ್ವಾನ ನೀಡಲಾಗಿದೆ.
ಈ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಮೋದಿ ಅವರು ಆಹ್ವಾನ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರನ್ನು ಆಹ್ವಾನಿಸಲಾಗಿದೆ.
ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಸುತ್ತೂರು ಮಠದ ಡಾ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಮಾದಾರ ಚೆನ್ನಯ್ಯ ಪೀಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ಮೂರ್ತಿ, ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್ ಭೈರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಕ್ರೀಡಾ ವಿಭಾಗದಿಂದ ಮಾಜಿ ಓಟಗಾರ್ತಿ ಪಿ.ಟಿ ಉಷಾ, ಮತ್ತು ಹರ್ಭಜನ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಬ್ಯಾಡ್ಮಿಂಟನ್ ತರಬೇತುಗಾರ ಪುಲೆಲ್ಲಾ ಗೋಪಿಚಂದ್ ಮತ್ತು ಜಿಮ್ನಾಸ್ಟಿಕ್ ಆಟಗಾರ್ತಿ ದೀಪಾ ಕರ್ಮಕರ್ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ನೆರೆಹೊರೆಯ ರಾಷ್ಟ್ರದ ಮುಖ್ಯಸ್ಥರು, ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಮತ್ತು ಚಲನಚಿತ್ರ ನಟರನ್ನು ಆಹ್ವಾನ ಮಾಡಲಾಗಿದೆ. ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆ ಸಂದರ್ಭದಲ್ಲಿ ಸಾವನ್ನಪ್ಪಿದ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಕುಟುಂಬಗಳನ್ನು ಆಹ್ವಾನ ಮಾಡಲಾಗಿದೆ.
ವಿದೇಶಿ ಗಣ್ಯರುಗಳಾಗಿ ಪ್ರಮಾಣ ವಚನ ಸ್ವೀಕರ ಸಭೆಗೆ ಬಿಮ್‍ಸ್ಟಿಕ್ (ಬಂಗಾಳ ಕೊಲ್ಲಿ ಬಹುವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಇರುವ ಸಂಘಟನೆ) ಈ ಸಂಘಟನೆಯ ಬಾಂಗ್ಲಾದೇಶ, ಭೂತಾನ್, ಮಯನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್ ದೇಶದ ಮುಖ್ಯಸ್ಥರು ಬರುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಮಾರಂಭಕ್ಕೆ ಆಹ್ವಾನ ಮಾಡಲಾಗಿದೆ. ಇವರ ಜೊತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಮಾರಂಭಕ್ಕೆ ಆಗಮಿಸಲಿದ್ದಾರೆ.