Crime
ಪತಿಯನ್ನು ಕೊಂದ ವಿಚಾರವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡ ಪತ್ನಿ

ನವದೆಹಲಿ: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದಿರುವ ವಿಚಾರವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡು ತಾನು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ದಂಪತಿ ಛತ್ತರ್ ಪುರದಲ್ಲಿನ ವಸತಿ ನಿಲಯದಲ್ಲಿ ವಾಸವಾಗಿದ್ದರು. ಒಂದು ದಿನ ಇದ್ದಕ್ಕಿದ್ದಂತೆ ಮಹಿಳೆ ತನ್ನ ಪತಿಗೆ ಚೂರಿಯಿಂದ ಇರಿದು ಕೊಂದಿದ್ದಾಳೆ. ಮಾತ್ರವಲ್ಲದೇ ಈ ವಿಚಾರವನ್ನು ತನ್ನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ.
ಮಹಿಳೆ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ವಿಚಾರವನ್ನು ಬೇರೆ ಮಹಿಳೆಯೊಬ್ಬರು ಗಮನಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದಾರೆ. ಆದರೆ ದಂಪತಿ ವಾಸವಿರುವ ಕೋಣೆಬಾಗಿಲು ಮುಚ್ಚಿತ್ತು. ಪೊಲೀಸರು ಬಾಗಿಲು ತೆರೆಯಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಹೀಗಾಗಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದ್ದಾರೆ. ಮಹಿಳೆ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಆಕೆಯ ಪತಿಯ ದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಮಹಿಳೆಯನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಕೆಲವು ಮೂಲಗಳ ಪ್ರಕಾರ ದಂಪತಿ ಮಕ್ಕಳಿಲ್ಲವೆಂದು ಮನನೊಂದು ಈ ಕೃತ್ಯಕ್ಕೆ ಕೈ ಹಾಕಿದ್ದಾರೆ ಎನ್ನಲಾಗುತ್ತಿದೆ. ಸ್ಥಳೀಯರ ಹೇಳಿಕೆ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ. ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
