ನವದೆಹಲಿ: 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಸಂಬಂಧ ಕೇಂದ್ರ ಆರೋಗ್ಯ ಸಚಿವಾಲಯದಿಂದ ಯಾವುದೇ ತೀರ್ಮಾನವಾಗಿಲ್ಲ ಎಂದು ಅಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.
ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಿಂದ 12ರಿಂದ 14 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎನ್‌ಟಿಎಜಿಐ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಆರೋಗ್ಯ ಸಚಿವಾಲಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?
15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ಡಿ.25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು. ಅದರಂತೆ ಈ ವಯಸ್ಸಿನ ಮಕ್ಕಳಿಗೆ ಜ.3ರಿಂದ ದೇಶಾದ್ಯಂತ ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಲಾಯಿತು.
15-18 ವಯಸ್ಸಿನ ಸುಮಾರು 3.5 ಕೋಟಿ ಮಕ್ಕಳು ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಭಾನುವಾರ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯಾ ಅವರು ಭಾನುವಾರ ಟ್ವೀಟ್ ಮಾಡಿ ತಿಳಿಸಿದ್ದರು. 12 ವರ್ಷ ವಯಸ್ಸು ಮೇಲ್ಪಟ್ಟ ಮಕ್ಕಳಿಗೆ ಕೋವ್ಯಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾಸ್ ಜೈಕೋವ್-ಡಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಈಗಾಗಲೇ ಅನುಮೋದಿಸಿದೆ. ಅದರಂತೆ 15-18 ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ನೀಡಲಾಗುತ್ತಿದೆ. ಇದನ್ನೂ ಓದಿ: ಜನ ಸ್ವ-ಇಚ್ಛೆಯಿಂದ ಲಸಿಕೆ ಹಾಕಿಸಿಕೊಳ್ಳಬೇಕು: ಸುಧಾಕರ್