– ಪೊಲೀಸರಿಂದ ಬಿಗಿ ಬಂದೋಬಸ್ತ್
– ಕನ್ನಡ ಪರ ಹೋರಾಟಗಾರರು ವಶಕ್ಕೆ
ಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ (Karnataka Bandh) ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ.
ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು (Bengaluru Police) ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಇಂದು ಬೆಳಗಿನ ಜಾವ 5:30ಕ್ಕೆ ಕೆ.ಹೆಚ್.ಬಿ. ನಗರದಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಗಿ ಬಂದೋಬಸ್ತ್:
ಸಾರ್ವಜನಿಕರಿಗೆ ಹಾಗೂ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಅವಕಾಶ:
ಪ್ರತಿಭಟನೆಗೆ ಫ್ರೀಡಂ ಪಾರ್ಕ್‌ಗೆ ಮಾತ್ರ ಸೀಮಿತಗೊಳಿಸಲಾಗಿದೆ. ಟೌನ್‌ಹಾಲ್ ಅಥವಾ ಇತರ ಭಾಗಗಳಿಂದ ಯಾವುದೇ ರ‍್ಯಾಲಿ ನಡೆಸಲು ಅವಕಾಶವಿಲ್ಲ. ರ‍್ಯಾಲಿ ಮಾಡಲು ಯತ್ನಿಸಿದರೆ ತಕ್ಷಣವೇ ವಶಕ್ಕೆ ಪಡೆಯಲಾಗುತ್ತದೆ.
ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ಸಾರ್ವಜನಿಕರಿಗೆ ತೊಂದರೆ ಕೊಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂದು ಕರ್ನಾಟಕ ಬಂದ್ ಇರುವುದಿಲ್ಲ. ಸಾರ್ವಜನಿಕರು ಹಾಗೂ ವರ್ತಕರು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಸೀಮಂತ್ ಕುಮಾರ್ ಸಿಂಗ್ ಅಭಯ ನೀಡಿದ್ದಾರೆ.
ಸಂಚಾರ ಯಥಾಸ್ಥಿತಿ
ಮೆಜೆಸ್ಟಿಕ್ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಲ್ಲಿ ಎಂದಿನಂತೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸಾಗಿದೆ. ಎಸಿಪಿ ದೀಪಕ್ ಅವರ ನೇತೃತ್ವದಲ್ಲಿ ಮೆಜೆಸ್ಟಿಕ್‌ನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಮುಂಜಾಗ್ರತೆಯಾಗಿ 2 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ಓಡಾಟಕ್ಕೆ ಯಾವುದೇ ವ್ಯತ್ಯಯವಾಗಿಲ್ಲ.
ಅತ್ತಿಬೆಲೆಯಲ್ಲಿ ಪ್ರತಿಭಟನೆ
ಬಂದ್‌ಗೆ ಬೆಂಬಲ ಸೂಚಿಸಿ ಬೆಂಗಳೂರು ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ‘ಕನ್ನಡ ಜಾಗೃತಿ ವೇದಿಕೆ’ಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ಅವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು. ಕರ್ನಾಟಕದ ಹಿತದೃಷ್ಟಿಯಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಯಾವುದೇ ರೀತಿಯ ಅಡ್ಡಿಪಡಿಸಬಾರದು ಎಂದು ಪ್ರತಿಭಟನಾಕಾರರು ತಮಿಳುನಾಡು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

