ಬೆಂಗಳೂರು: ಝಿರೋ ಟ್ರಾಫಿಕ್ ತಗೆದುಕೊಳ್ಳಬೇಡಿ ಎಂದು ಬಿಜೆಪಿ ಹೈಕಮಾಂಡ್ ರಾಜ್ಯದ ಮೂವರು ಜನ ಉಪ ಮುಖ್ಯಮಂತ್ರಿಗಳಿಗೆ ಖಡಕ್ ಸೂಚನೆ ರವಾನಿಸಿದೆ.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ ಹಾಗೂ ಲಕ್ಷ್ಮಣ ಸವದಿ ಅವರು ಝಿರೋ ಟ್ರಾಫಿಕ್ ತೆಗೆದುಕೊಳ್ಳಬಾರದು. ಝಿರೋ ಟ್ರಾಫಿಕ್‍ನಿಂದ ಸಂಚಾರ ಅಸ್ತವ್ಯಸ್ತವಾಗಲಿದೆ. ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ತೊಂದರೆಯಾಗುತ್ತದೆ. ಇದರಿಂದಾಗಿ ಜನರಿಗೆ ಕೆಟ್ಟ ಸಂದೇಶ ಹೋಗಿ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನೀಡಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಸಿ.ಎನ್.ಅಶ್ವಥ್ ನಾರಾಯಣ ಅವರು, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಝಿರೋ ಟ್ರಾಫಿಕ್ ವ್ಯವಸ್ಥೆಯ ಅನುಕೂಲವನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಝಿರೋ ಟ್ರಾಫಿಕ್‍ನಿಂದಾಗಿ ಮಾಜಿ ಡಿಸಿಎಂ ಪರಮೇಶ್ವರ್ ಅವರು ವಿವಾದಕ್ಕೆ ಗುರಿಯಾಗಿದ್ದರು. ಈ ವಿಚಾರವಾಗಿ ಎಚ್ಚೆತ್ತುಕೊಂಡ ಬಿಜೆಪಿ ಹೈಕಮಾಂಡ್ ತಮ್ಮ ಉಪ ಮುಖ್ಯಮಂತ್ರಿಗಳಿಗೆ ಝಿರೋ ಟ್ರಾಫಿಕ್ ಸೌಲಭ್ಯ ಪಡೆಯದಂತೆ ಖಡಕ್ ಸೂಚನೆ ನೀಡಿದೆ.
2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಸ್ಥಾನದಲ್ಲಿ ಬಿ.ಎಸ್.ಯಡಿಯೂರಪ್ಪ ಇದ್ದರು. ಆಗ ಬಿ.ಎಸ್.ಯಡಿಯೂರಪ್ಪ ಅವರಿಗೆ ಝಿರೋ ಟ್ರಾಫಿಕ್ ಸೌಲಭ್ಯವನ್ನು ಕಲ್ಪಿಸಲಾಗಿತ್ತು. 2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಡಾ.ಜಿ.ಪರಮೇಶ್ವರ್ ಡಿಸಿಎಂ ಆಗಿದ್ದರು. ಅವರಿಗೂ ಝಿರೋ ಟ್ರಾಫಿಕ್ ಸೌಲಭ್ಯ ನೀಡಲಾಗಿತ್ತು. ಆದರೆ ಈಗ ಬಿಜೆಪಿ ಈ ಸೌಲಭ್ಯವನ್ನು ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ.