ನವದೆಹಲಿ: ದೆಹಲಿ (New Delhi) ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅರವಿಂದರ್ ಸಿಂಗ್ ಲವ್ಲಿ (Arvinder Singh Lovely) ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆಬಿದ್ದಿದೆ. ನಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಅರವಿಂದರ್ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಆದರೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಸ್ಥಾನದಿಂದ ಕೆಳಗಿಳಿದಿರುವುದಾಗಿ ಲವ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪ್ ಮೈತ್ರಿಗೆ ವಿರೋಧ – ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ
ನಾನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಮಾತ್ರ ಕೆಳಗಿಳಿದಿದ್ದೇನೆ. ಇನ್ನೂ ಪಕ್ಷದಲ್ಲಿದ್ದೇನೆ. ಸದ್ಯಕ್ಕೆ ನಾನು ಬೇರೆ ಯಾವುದೇ ಪಕ್ಷಕ್ಕೆ ಸೇರುವ ಯೋಜನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನೋವು ನನ್ನೊಬ್ಬನದಲ್ಲ. ಕಾಂಗ್ರೆಸ್‌ನ ಎಲ್ಲಾ ನಾಯಕರದ್ದೂ ಆಗಿದೆ. ನಾನು ಅದನ್ನು ಪತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಹಂಚಿಕೊಂಡಿದ್ದೇನೆ ಎಂದು ಅರವಿಂದರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು, ಅಭ್ಯರ್ಥಿ ಬೇಡ – ಪ್ರಚಾರದಿಂದ ದೂರ ಸರಿದ ನಸೀಮ್ ಖಾನ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಅರವಿಂದರ್, ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಎಎಪಿ ಸಚಿವರು ಜೈಲು ಪಾಲಾಗಿರುವ ಬಗ್ಗೆ ಗಮನ ಸೆಳೆದಿದ್ದಾರೆ.
ಲೋಕಸಭೆ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ದೆಹಲಿ ಕಾಂಗ್ರೆಸ್ ಕಾರ್ಯಕರ್ತರ ಹಿತಾಸಕ್ತಿ ರಕ್ಷಿಸಲು ಸಾಧ್ಯವಾಗದೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.