ಭುವನೇಶ್ವರ್: ಜಗಳದ ವೇಳೆ ಪತ್ನಿ (Wife) ಮೊಬೈಲ್ ಫೋನ್‌ನಿಂದ (Mobile) ತಲೆಗೆ ಹೊಡೆದ ಪರಿಣಾಮ ಗಾಯಗೊಂಡಿದ್ದ ಪತಿ (Husband) ಚಿಕಿತ್ಸೆ ಪಡೆದು ಮನೆಗೆ ಮರಳಿದ ಕೆಲವೇ ಹೊತ್ತಿನಲ್ಲಿ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ಒಡಿಶಾದ (Odisha) ಬಲಾಂಗೀರ್ (Bolangir) ಜಿಲ್ಲೆಯಲ್ಲಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಶನಿವಾರ ದಂಪತಿಯ ನಡುವೆ ಮನೆಯಲ್ಲಿ ಕುಟುಂಬ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಪತ್ನಿ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಾಳೆ ಎನ್ನಲಾಗಿದೆ. ಪರಿಣಾಮ ಪತಿ ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ಮತದಾರರಿಗೆ ಹಣ ಹಂಚಲು 10 ಕೋಟಿ ರೂ. ಸಂಗ್ರಹ ಆರೋಪ; ಸುಧಾಕರ್ ಪ್ರಕರಣದ ವಿಚಾರಣೆ ಮುಂದೂಡಿಕೆ
ಗಾಯಾಳು ಪತಿಯನ್ನು ತಕ್ಷಣವೇ ಬಲಾಂಗೀರ್ ಜಿಲ್ಲಾ ಕೇಂದ್ರ ಆಸ್ಪತ್ರೆಗೆ (ಡಿಎಚ್‌ಎಚ್) ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರು ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದರು. ಆದರೆ ಮನೆಗೆ ಮರಳಿದ ಕೆಲವೇ ಸಮಯದಲ್ಲಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದೆ. ಕೂಡಲೇ ಕುಟುಂಬಸ್ಥರು ಮತ್ತೆ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಪತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟ ಟೆಕ್ಕಿ
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ವರದಿ ಹಾಗೂ ಮರಣೋತ್ತರ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಕೆ.ಜೆ. ಜಾರ್ಜ್ ಸೂಚನೆ
