ಯಾದಗಿರಿ: ಜಿಲ್ಲೆಯ ಅಂಬೇಡ್ಕರ್ ನಗರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಬೇಡ್ಕರ್ ನಗರದ ವೆಂಕಟರಮಣ ದೇವಸ್ಥಾನದಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಜಿಲ್ಲೆಯ ಮಕ್ಕಳ ಸಹಾಯವಾಣಿ 1098 ಸಂಖ್ಯೆಗೆ ಅನಾಮಧೇಯ ಕರೆ ಬಂದಿತ್ತು. ಕರೆಯ ಅನುಸಾರ ತಕ್ಷಣವೇ ಕಾರ್ಯಪ್ರವೃತ್ತರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿವಾಹವನ್ನು ನಿಲ್ಲಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ ಅಧಿಕಾರಿಗಳು ವಧು ಮತ್ತು ವರನ ತಂದೆ-ಯಿಗೆ ಬುದ್ಧಿ ಹೇಳಿದ್ದಾರೆ. ಬಾಲ್ಯವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಸಹ ಮಾಡಿದ್ದಾರೆ. ಬಾಲಕಿಯನ್ನು ಸದ್ಯ ಬಾಲ ಭವನದಲ್ಲಿ ಉಪಚರಿಸಲಾಗುತ್ತಿದೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನೆ ನಿರ್ದೇಶಕ ರಘುವೀರ ಸಿಂಗ್ ಠಾಕೂರ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ರಾಧಾ ಎಚ್. ಚನ್ನಕ್ಕಿ, ಡಿಸಿಪಿಯು ಘಟಕದ ಸಿಬ್ಬಂದಿ ಗೋವಿಂದ್ ಸೇರಿದಂತೆ ಇತರೆ ಅಧಿಕಾರಿಗಳು ಬಾಲ್ಯವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.