ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಸಿಂಧನೂರಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಕೈ ತೊಳೆಯಿಸಿ ಬಳಿಕ ಪರೀಕ್ಷೆ ಬರೆಯಲು ಕೇಂದ್ರದ ಒಳಗೆ ಬಿಡುವ ಮೂಲಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.
ಸಿಂಧನೂರು ನಗರದ ಸಂಕೇತ್ ಪಿಯು ಕಾಲೇಜಿನಲ್ಲಿ ನಡೆಯುತ್ತಿರುವ ದ್ವಿತೀಯ ವರ್ಷದ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಕೈ ತೊಳೆಯಿಸಲಾಗಿದೆ. ಇಂದು ಕನ್ನಡ ಪತ್ರಿಕೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೋಪ್ ಹಾಕಿ ಕೈ ತೊಳೆದು ಪರೀಕ್ಷೆ ಬರೆಯಲು ತೆರಳಿದರು.
ಕಾಲೇಜು ಆಡಳಿತ ಮಂಡಳಿ ನಿರ್ಧಾರಕ್ಕೆ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲದಂತೆ ಹಾಗೂ ಹರಡದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸದ್ಯ ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ಅಧಿಕಾರಿಗಳು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ.
ಆಹಾರ, ನೀರು, ಔಷಧಿ ಸೇರಿ ಅಗತ್ಯ ವಸ್ತು ಮಾರಾಟಕ್ಕೆ ಮಾತ್ರ ಅವಕಾಶವಿದೆ. ಹೋಟೆಲ್ ಗಳಲ್ಲಿ ಊಟ, ತಿಂಡಿ ಪಾರ್ಸಲ್ ಮಾರಾಟಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಬೀದಿ ಬದಿಯ ಟೀ ಅಂಗಡಿ, ಮಟನ್, ಚಿಕನ್ ಕಬಾಬ್ ಸೆಂಟರ್ ಸೇರಿ ಇತರೆ ಅಂಗಡಿಗಳನ್ನು ಬಂದ್ ಮಾಡಲಾಗಿದೆ.