-ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: 2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕವಾದ 13,000 ಸರ್ಕಾರಿ ನೌಕರರರಿಗೆ (Government Employees) ಹಳೆ ಪಿಂಚಣಿ ವ್ಯವಸ್ಥೆ (Old Pension Scheme) ಜಾರಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಚುನಾವಣೆ (Election) ವೇಳೆ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ (NPS) ರದ್ದು ಮಾಡಿ ಓಪಿಎಸ್ (OPS) ಜಾರಿ ಮಾಡುವುದಾಗಿ ಕಾಂಗ್ರೆಸ್ (Congress) ಭರವಸೆ ನೀಡಿತ್ತು. ಓಪಿಎಸ್‌ಗಾಗಿ ನಡೆದ ಹೋರಾಟದ ವೇಳೆ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕರು ಓಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು.
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ 13,000 ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓಪಿಎಸ್ ಜಾರಿಗೆ ಸರ್ಕಾರ ಷರತ್ತು ವಿಧಿಸಿದ್ದು, ಷರತ್ತಿಗೆ ಒಳಪಟ್ಟಿವರಿಗೆ ಮಾತ್ರ ಓಪಿಎಸ್ ಅನ್ವಯ ಎಂದು ಆದೇಶ ನೀಡಿದೆ.
ಸರ್ಕಾರದ ಷರತ್ತುಗಳೇನು?
* 01-04-2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ ದಿನಾಂಕ 30.06.2024 ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
* ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
* ಮೇಲಿನ 1ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
* ನೌಕರರ ಆಯ್ಕೆಗನುಸಾರ ಅವರು ಹಿಂದಿನ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31-7-2024ರೊಳಗೆ ಅಂತಹ ನೌಕರರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೂಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.
* ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ 31-8-2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು.
* ದಿನಾಂಕ 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ನ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ 30-06-2014ರೊಳಗೆ ಸಲ್ಲಿಸತಕ್ಕದ್ದು. ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅದನ್ನ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು.