ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ಕಸರತ್ತು ಮುಂದುವರಿದಿದ್ದು, ಕಾಂಗ್ರೆಸ್ ನಾಯಕರ ಪುತ್ರರ ನಡುವೆ ಸಚಿವ ಸ್ಥಾನದ ಕುರಿತು ಪೈಪೋಟಿ ಆರಂಭವಾಗಿದೆ.
ಇದರ ನಡುವೆ ರಾಜ್ಯದ ಪ್ರಭಾವಿ ಕಾಂಗ್ರೆಸ್ ಮುಖಂಡರು ಸಹ ತಮ್ಮ ಮಕ್ಕಳಿಗೆ ಸಚಿವ ಸ್ಥಾನ ಕೊಡಿಸಲು ಮುಂದಾಗಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಪಡೆಯಲು ನಾಲ್ವರು ಕಾಂಗ್ರೆಸ್ ನಾಯಕರ ಮಕ್ಕಳ ಮಧ್ಯೆ ತೀವ್ರ ಪೈಪೋಟಿ ಆರಂಭವಾಗಿದೆ.
Advertisement
Advertisement
ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪುತ್ರ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಅವರು ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಮೈಸೂರು ಭಾಗದ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ಒತ್ತಡ ಹೆಚ್ಚಾಗಿದೆ. ಆದರೆ ಇಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ಅವರು ಸಹ ಸಚಿವ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಪರಿಣಾಮ ಪೈಪೋಟಿಗೆ ಕಾರಣವಾಗಿದೆ.
Advertisement
ಕಲಬುರಗಿ ಜಿಲ್ಲಾ ಕೋಟಾದಡಿ ಸಂಸದ ಮಲ್ಲಿಕಾರ್ಜುನ ಖರ್ಗೆ ಪುತ್ರ ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ ಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಪುತ್ರ ಜೇವರ್ಗಿ ಶಾಸಕ ಅಜಯ್ ಸಿಂಗ್ ಇರುವ ಕಾರಣ ಯಾರಿಗೆ ಮಂತ್ರಿಸ್ಥಾನ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.
Advertisement
ಈ ಬಾರಿಯ ಸಂಪುಟದಲ್ಲಿ ಸ್ಥಾನ ಪಡೆಯಲು ಮಹಿಳಾ ಶಾಸಕಿಯರ ನಡುವೆಯೂ ಸ್ಪರ್ಧೆ ಆರಂಭವಾಗಿದ್ದು, ಮಹಿಳಾ ಕೋಟಾದಡಿ ಕೇಂದ್ರದ ಮಾಜಿ ಸಚಿವ, ಸಂಸದ ಮುನಿಯಪ್ಪ ಪುತ್ರಿ ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಈ ರೇಸ್ ನಲ್ಲಿದ್ದಾರೆ.
ಕಾಂಗ್ರೆಸ್ ನಾಯಕರ ಮಕ್ಕಳ ಈ ಪೈಪೋಟಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಡಿವಾಣ ಹಾಕುವ ಸಾಧ್ಯತೆ ಇದ್ದು, ಯುವ ನಾಯಕರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವುದು ಕಾದುನೋಡಬೇಕಿದೆ.