Friday, 20th July 2018

Recent News

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಕೊಪ್ಪಳದಲ್ಲಿ 12 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

ಕೊಪ್ಪಳ: ಜಿಲ್ಲೆಯನ್ನು ಅಕ್ಟೋಬರ್ 2ರ ಒಳಗಡೆ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ಸಪ್ತಾಹ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಜಿಪಂ ವತಿಯಿಂದ ನಗರದ ಗವಿಮಠ ಮೈದಾನದಲ್ಲಿ ಸುಮಾರು 12 ಸಾವಿರ ಜನರರಿಂದ ಬೃಹತ್ ಮಾನವ ಸರಪಳಿಯನ್ನು ಆಯೋಜಿಸಲಾಯಿತು.

ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸುಮಾರು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ಬೃಹತ್ ಮಾನವ ಸರಪಳಿ ಆಯೋಜಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ್ ಅವರು, ಶೌಚಾಲಯ ಜಾಗೃತಿಗೆ ಇಡೀ ದೇಶದಲ್ಲಿಯೇ ವೈವಿದ್ಯಮಯ ಕಾರ್ಯಕ್ರಮಗಳ ಮೂಲಕ ಸಂಚಲನ ಮೂಡಿಸಿದ ಜಿಲ್ಲೆಯಾಗಿದೆ. ಅಲ್ಲದೆ ಶೌಚಾಲಯ ನಿರ್ಮಾಣದಲ್ಲೂ ಕೊಪ್ಪಳ ಜಿಲ್ಲೆ ಇಡೀ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದು, ಅತಿ ಹೆಚ್ಚು ಶೌಚಾಲಯ ನಿರ್ಮಾಣವಾಗಿದೆ ಎಂದರು.

 

ಜಿಲ್ಲೆಯಲ್ಲಿ ಸುಮಾರು 2 ಲಕ್ಷ ಶೌಚಾಲಯ ನಿರ್ಮಾಣವಾಗಿದ್ದು, ಇನ್ನೂ ಸುಮಾರು 50 ಸಾವಿರ ಶೌಚಾಲಯ ನಿರ್ಮಾಣ ಮಾತ್ರ ಬಾಕಿ ಇದೆ. ಇದುವರೆಗೂ ಶೌಚಾಲಯ ನಿರ್ಮಾಣ ಮಾಡಿಸಿಕೊಳ್ಳದೇ ಇರುವ ಕುಟುಂಬಗಳು ಎರಡು ತಿಂಗಳ ಒಳಗಾಗಿ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಇದಕ್ಕಾಗಿ ಸ್ವಚ್ಛ ಭಾರತ ಅಭಿಯಾನದಲ್ಲಿ ಸಹಾಯಧನವನ್ನು ಸರ್ಕಾರ ನೀಡಲಿದೆ. ಅ.2 ರಂದು ಗಾಂಧಿ ಜಯಂತಿ ಕಾರ್ಯಕ್ರಮವಿದ್ದು, ಸ್ವಚ್ಛ ಭಾರತ ನಿರ್ಮಾಣದ ಕನಸು ಕಂಡಿದ್ದ ಗಾಂಧೀಜಿಯವರ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿಸಲು ಜಿಲ್ಲಾ ಪಂಚಾಯತಿ ಈ ಗುರಿ ಹಾಕಿಕೊಂಡಿದೆ ಎಂದು ತಿಳಿಸಿದರು.

ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ದೈಹಿಕ ಶಿಕ್ಷಕರು, ಸಾರ್ವಜನಿಕರು ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಜನರಿಂದ ಶೌಚಾಲಯ ಜಾಗೃತಿಗಾಗಿ ನಿರ್ಮಿತವಾದ ಮಾನವ ಸರಪಳಿಯ ಅಭೂತಪೂರ್ವ ದೃಶ್ಯ ಎಲ್ಲರ ಗಮನ ಸೆಳೆಯಿತು. ಒಟ್ಟಾರೆ ಕೊಪ್ಪಳ ಜಿಲ್ಲೆಯಲ್ಲಿ ಶೌಚಾಲಯ ಜಾಗೃತಿಗಾಗಿ ಏರ್ಪಡಿಸಲಾಗಿದ್ದ ಬೃಹತ್ ಮಾನವ ಸರಪಳಿ ವಿಶೇಷವಾಗಿದೆ.

ಶುಕ್ರವಾರದಿಂದ ಆರಂಭಗೊಂಡ ಈ ಜಾಗೃತಿ ಕಾರ್ಯಕ್ರಮ ಅಕ್ಟೋಬರ್ 2 ರವರೆಗೆ ನಡೆಯಲಿದೆ.

 

 

Leave a Reply

Your email address will not be published. Required fields are marked *