ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು (FIR) ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ರದ್ದುಗೊಳಿಸಿದೆ.
ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರಿದ್ದ ಪೀಠವು ಸಂವಿಧಾನದ 142ನೇ ವಿಧಿಯನ್ವಯ ಇರುವ ಪರಮಾಧಿಕಾರವನ್ನು ಬಳಸಿ ಈ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಿತು.
ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಹೊರತುಪಡಿಸಿ, ಇತರ ಯಾವುದೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಖಲಾಗಿರುವ ಇಂತಹದೇ ಎಫ್‌ಐಆರ್‌ಗಳ ತನಿಖೆಯನ್ನು ಮುಂದುವರಿಸಬಾರದು ಹಾಗೂ ಅವುಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ಯುವ ಪ್ರತಿಭಟನಾಕಾರರ ಭವಿಷ್ಯದ ದೃಷ್ಟಿಯಿಂದ, ಪರಿಪೂರ್ಣ ನ್ಯಾಯ ಒದಗಿಸುವ ಸಲುವಾಗಿ ನಾವು ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನಮ್ಮ ಅಧಿಕಾರವನ್ನು ಚಲಾಯಿಸುತ್ತಿದ್ದೇವೆ ಎಂದು ಎಂದು ನ್ಯಾಯಪೀಠ ಹೇಳಿದೆ. ಜುಲೈ 20 ರಿಂದ 25 ರ ನಡುವೆ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಎಫ್‌ಐಆರ್ ದಾಖಲಿಸಬಾರದು ಎಂದೂ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಸೆ. 5ರ ದೆಹಲಿ ಪ್ರತಿಭಟನಾ ಮೆರವಣಿಗೆ ಹಿಂಪಡೆದ ಸಿಜೆಪಿ: ಸುಪ್ರೀಂಗೆ ಮಾಹಿತಿ

ದೆಹಲಿ ಮತ್ತು ಬಿಹಾರದಲ್ಲಿ ಪ್ರತಿಭಟನಾಕಾರರ ಮೇಲೆ ಅತಿಯಾದ ಬಲಪ್ರಯೋಗ ಮಾಡಲಾಗಿದೆ ಎಂಬ ಆರೋಪ ಸೇರಿದಂತೆ, ಸಿಜೆಪಿ ಪ್ರತಿಭಟನೆಗೆ ಸಂಬಂಧಿಸಿದ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಸೋಮವಾರ ಅರ್ಜಿ ಸಲ್ಲಿಸಿದ್ದ ಕೇಂದ್ರ ಸರ್ಕಾರ, ಜುಲೈ 20 ರಿಂದ 25 ರ ನಡುವೆ ದೆಹಲಿ ಪೊಲೀಸರು ದಾಖಲಿಸಿದ್ದ 13 ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶದ ಪ್ರಕಾರ ಗಂಭೀರ ಅಪರಾಧ ಹಿನ್ನೆಲೆ ಹೊಂದಿರುವ ದೆಹಲಿಯ 2,873 ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ತನಿಖೆಯು ಕೇವಲ ದೈಹಿಕ ಹಲ್ಲೆ ಅಥವಾ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಅಪರಾಧಗಳಿಗೆ ಮಾತ್ರ ಸೀಮಿತವಾಗಿರಲಿದೆ. ಅಂತಹ ವ್ಯಕ್ತಿಗಳ ವಿರುದ್ಧ ಒಂದೇ ಹೊಸ ಎಫ್‌ಐಆರ್ ದಾಖಲಿಸಲು ಕೇಂದ್ರ ಪ್ರಸ್ತಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಇಂದು ಮುಕ್ತ ಅವಕಾಶ ನೀಡಿದೆ.
