ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋ ಲೀಕ್ ಪ್ರಕರಣಕ್ಕೆ(Parappana Agrahara Video Leak Case) ಸಂಬಂಧಿಸಿದಂತೆ ತನಿಖೆಗೆ ಸಹಕರಿಸದ ನಟ ಧನ್ವೀರ್ಗೆ(Dhanveer) ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ತಪ್ಪದೇ ಸಿಸಿಬಿ (CCB) ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ(High Court) ನಿರ್ದೇಶನ ನೀಡಿದೆ.
ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ಸೋರಿಕೆ ಪ್ರಕರಣದ ತನಿಖೆಗೆ ನಟ ಧನ್ವೀರ್ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ (NBW) ಜಾರಿಯಾಗಿತ್ತು. ಈ ವಾರೆಂಟ್ ರದ್ದುಗೊಳಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಅನೂಪ್ ಕುಮಾರ್,ನ್ಯಾಯಾಲಯವು ಈ ಹಿಂದೆ ವಾರೆಂಟ್ಗೆ ತಡೆ ನೀಡಿದ್ದರೂ, ನಟ ಧನ್ವೀರ್ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಹೀಗಾಗಿ, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಅವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಸರ್ಕಾರಿ ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರ ಏಕಸದಸ್ಯ ಪೀಠವು, ಇದೇ ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ನಟ ಧನ್ವೀರ್ಗೆ ಸೂಚನೆ ನೀಡಿದೆ.
