ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು (Parliament Monsoon Session) ಜುಲೈ 20 ರಿಂದ ಆರಂಭವಾಗಿ ಆಗಸ್ಟ್ 13ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆ ಬಳಿಕ ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
On the recommendation of the Govt of India, Hon’ble President, Smt. Droupadi Murmu ji has approved the summoning of both the Houses of Parliament for the Monsoon Session 2026.
The Session will commence on 20 July, 2026 and continue till 13 August, 2026 for meaningful debate,… pic.twitter.com/TaEYH4F1cK— Kiren Rijiju (@KirenRijiju) July 4, 2026
ಸುಮಾರು 4 ವಾರಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ 19 ಕಲಾಪಗಳು ನಡೆಯುವ ಸಾಧ್ಯತೆ ಇದ್ದು, ಹಲವು ಮಹತ್ವದ ಮಸೂದೆಗಳು ಹಾಗೂ ರಾಷ್ಟ್ರೀಯ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ಈ ಬಾರಿಯ ಅಧಿವೇಶನ ರಾಜಕೀಯವಾಗಿ ತೀವ್ರ ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.
ಲೋಕಸಭೆ (Lok Sabh) ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಜಾರಿಗೆ ಸಂಬಂಧಿಸಿದ ಸಂವಿಧಾನ 130ನೇ ತಿದ್ದುಪಡಿ ಮಸೂದೆ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗಳನ್ನ ಕೇಂದ್ರ ಸರ್ಕಾರ ಮತ್ತೊಮ್ಮೆ ಮಂಡಿಸಲು ಸಿದ್ಧತೆ ನಡೆಸಿದೆ. ಈ ಮಸೂದೆಗಳಿಗೆ ಅಗತ್ಯ ಬೆಂಬಲ ಪಡೆಯಲು ಆಡಳಿತಾರೂಢ ಎನ್‌ಡಿಎ ಸರ್ಕಾರ (NDA Government) ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ.

ಇನ್ನೊಂದೆಡೆ, ಪ್ರತಿಪಕ್ಷಗಳು ಸರ್ಕಾರವನ್ನ ಹಲವು ಜನಪ್ರಿಯ ಹಾಗೂ ವಿವಾದಾತ್ಮಕ ವಿಷಯಗಳ ಕುರಿತು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ಹಣದುಬ್ಬರ, ಇಂಧನ ಬೆಲೆ ಏರಿಕೆ, ನಿರುದ್ಯೋಗ, ಕೃಷಿ ಸಮಸ್ಯೆಗಳು ಹಾಗೂ ಇತರ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ.
ಇದರ ಜೊತೆಗೆ ವಿವಿಧ ಪಕ್ಷಗಳ ಸಂಸದರು ಪಕ್ಷಾಂತರ ಮಾಡಿರುವ ಬೆಳವಣಿಗೆಗಳು, ಲೋಕಸಭೆಯಲ್ಲಿ ಅವರ ಮಾನ್ಯತೆ ಮತ್ತು ಆಸನ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳೂ ಅಧಿವೇಶನದಲ್ಲಿ ಚರ್ಚೆಗೆ ಬರಬಹುದು. ಸ್ಪೀಕರ್ ಅವರ ತೀರ್ಮಾನವು ಸದನದ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
