ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆಂಗೇರಿಯ ಮೈಲಸಂದ್ರದ ದುಬಾಸಿಪಾಳ್ಯಾದ ಬಳಿ ನಡೆದಿದೆ.
ಶುಕ್ರವಾರ ರಾತ್ರಿ ಪಾದಚಾರಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬಸ್ ಏಕಾಏಕಿ ಪಾದಾಚಾರಿಗೆ ಗುದ್ದಿದೆ. ಬಸ್ ಗುದ್ದಿದ ರಭಸದಿಂದ ಪಾದಾಚಾರಿಯ ತಲೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದ ಕಾರಣ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪಾದಚಾರಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಈ ಘಟನೆ ಕುರಿತು ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.