ಉಡುಪಿ: ಸರ್ಕಾರ ಬಿದ್ದರೂ ಪರವಾಗಿಲ್ಲ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಕಳೆದಿದೆ. ಇನ್ನೂ ರಾಮ ಮಂದಿರ ನಿರ್ಮಾಣ ಆಗಿಲ್ಲ. ನಾವು ಕಾದಿದ್ದೇವೆ, ಈಗ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ದೃಢ ನಿರ್ಧಾರವು ಕೇಂದ್ರ ಸರ್ಕಾರಕ್ಕೆ ಅನುಕೂಲ ಆಗಲಿದೆ. ನ್ಯಾಯಾಲಯವನ್ನು ಕಾಯುವುದಕ್ಕೆ ಸಾಧ್ಯವಿಲ್ಲ. ಮೋದಿ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ. ಇದರಿಂದಾಗಿ ಮಾಜಿ ಪ್ರಧಾನಿ ವಾಜಪೇಯಿ ಸರ್ಕಾರಕ್ಕಿಂತ ಹೆಚ್ಚು ಅನುಕೂಲ ಮೋದಿ ಅವರಿಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಈಗ ವಿರೋಧ ಮಾಡಲಿಕ್ಕಿಲ್ಲ, ಚುನಾವಣೆ ಹತ್ತಿರ ಇರುವುದರಿಂದ ಯಾರೂ ವಿರೋಧ ಮಾಡಲ್ಲ. ವಿರೋಧ ಮಾಡುವ ಧೈರ್ಯ ಯಾರಿಗೂ ಇಲ್ಲ. ರಾಮ ಮಂದಿರ ಸಮಸ್ಯೆ ಬಗೆಹರಿಸಲು ಮೂರು ಮಾರ್ಗಗಳಿವೆ, ಸಂಯುಕ್ತ ಅಧಿವೇಶನದ ಮೂಲಕ ಸಮಸ್ಯೆ ಬಗೆಹರಿಸಬಹುದು. ಲೋಕಸಭೆ- ರಾಜ್ಯಸಭೆ ಅಧಿವೇಶನದಲ್ಲಿ ತೀರ್ಮಾನಿಸಬಹುದು. ಇಲ್ಲವೇ ಮಂದಿರ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲಿ ಎಂದು ಸಲಹೆ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv