ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧಿಸಿದರೆ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ರಾಮ ಮಂದಿರ ಬೃಹತ್ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶ್ರೀಗಳು, ಕೋರ್ಟ್ ನಿಂದ ಹೊರಗೆ ಮಂದಿರ ನಿರ್ಮಾಣದ ಸಮಸ್ಯೆ ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಸತ್ತಿನ ಸಂಯುಕ್ತ ಸಭೆ ಕರೆದು ನಿರ್ಧಾರ ತೆಗೆದುಕೊಳ್ಳಬೇಕು. ಅವಶ್ಯಕತೆ ಬಿದ್ದರೆ ಸುಗ್ರೀವಾಜ್ಞೆ ಅಥವಾ ಶಾಸನ ರಚಿಸಿ ಮಂದಿರ ನಿರ್ಮಾಣಕ್ಕೆ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರು ವಿರೋಧ ವ್ಯಕ್ತಪಡಿಸುವುದಿಲ್ಲ. ಅಷ್ಟೇ ಅಲ್ಲದೆ ಕಾಂಗ್ರೆಸ್‍ನಿಂದಲೂ ತಕರಾರು ಇಲ್ಲ. ಆದರೆ ಇದು ಚುನಾವಣೆಗಾಗಿ ನಡೆಯುತ್ತಿರುವ ಆಂದೋಲನವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ನಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ರಾಮ ಮಂದಿರಕ್ಕಾಗಿ ಬೃಹತ್ ಜನಾಗ್ರಹ ಸಭೆ ನಡೆದಿದೆ. ಈ ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿಯಲ್ಲಿ ಕುಂಭಮೇಳಕ್ಕಿಂತ ಮೊದಲೇ ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗುತ್ತಾರೆ ಎನ್ನುವ ಭರವಸೆ ನೀಡಬೇಕು. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಕುಂಭಮೇಳದಲ್ಲಿ ಸಂತರು ಸಭೆ ಸೇರಿ ಮುಂದಿನ ಹೋರಾಟ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv