ಬೆಂಗಳೂರು: ಕನ್ನಡದ ಗಾನಕೋಗಿಲೆ ಎಸ್.ಜಾನಕಿ ಅವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ʼಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್.ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ. ಅನೇಕ ಗಾಯಕರನ್ನು ಪ್ರೋತ್ಸಾಯಿಸಿ ಬೆಳೆಸಿದ, ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿʼ ಎಂದು ಸಂತಾಪ ಸೂಚಿಸಿದ್ದಾರೆ.
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ.… pic.twitter.com/TMRVxWJSXI
— CM of Karnataka (@CMofKarnataka) July 11, 2026
ಗಾನಕೋಗಿಲೆ, ಬಹುಭಾಷಾ ಗಾಯಕಿಯಾಗಿದ್ದ ಎಸ್.ಜಾನಕಿ ಅವರು ನಿಧನರಾದರು ಎಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ತಮ್ಮ ಮಧುರ ಕಂಠದಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಮಹಾನ್ ಗಾಯಕಿ ಜಾನಕಿ ಅವರು. ಮೈಸೂರಿನಲ್ಲಿ ನೆಲೆಸಿದ್ದ ಅವರು ಕನ್ನಡಿಗರಿಗೆ ಬಹು ಅಚ್ಚುಮೆಚ್ಚಿನ ಗಾಯಕರಾಗಿದ್ದರು. ಅವರ ನಿಧನ ಗಾನಲೋಕದಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಆದರೂ ಅವರು ಬಿಟ್ಟು ಹೋಗಿರುವ ಸಂಗೀತ ಸಂಪತ್ತು ಅಮರ, ಅಜರಾಮರ. ಆ ಗಾನ ಸರಸ್ವತಿಯ ಆತ್ಮಕ್ಕೆ ಚಿರಶಾಂತಿ ಕೋರುತ್ತಾ ಅವರ ಬಂಧುಗಳು ಮತ್ತು ಅಭಿಮಾನಿ ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಂತಾಪದ ನುಡಿಗಳನ್ನಾಡಿದ್ದಾರೆ.
ವಿಜಯೇಂದ್ರ ಸಂತಾಪ
ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ಎಲ್ಲಾ ಪ್ರಕಾರದ ಗೀತೆಗಳನ್ನೂ ಅವರು ಹಾಡಿದ್ದರು. ʼದಕ್ಷಿಣ ಭಾರತದ ‘ಗಾನಕೋಗಿಲೆ’ ಎಂದೇ ಪ್ರಖ್ಯಾತರಾದ ದಂತಕಥೆ, ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಆರು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತಮ್ಮ ಸುಮಧುರ ಕಂಠದ ಮೂಲಕ ಮನೆಮಾತಾಗಿದ್ದರು. ತಮ್ಮ ಸುದೀರ್ಘ ಗಾಯನ ಜೀವನದಲ್ಲಿ ಅವರು 17 ಭಾμÉಗಳಲ್ಲಿ 48 ಸಾವಿರಕ್ಕೂ ಅಧಿಕ ಅಮರ ಗೀತೆಗಳಿಗೆ ದನಿಯಾಗಿದ್ದರು ಎಂದು ಸ್ಮರಿಸಿದ್ದಾರೆ. ಅವರ ಅಭಿಮಾನಿಗಳು, ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
