– ಮೇಕೆದಾಟು, ಕಸ್ತೂರಿ ರಂಗನ್ ವರದಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ
ಬೆಂಗಳೂರು: ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ನೆರವೇರಿಸಲು ನ.13 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಿದ್ದರು. ಈ ವೇಳೆ ಬೆಂಗಳೂರಿಂದ ಮೈಸೂರಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುವಾಗ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವೆ ರಾಜ್ಯದ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆದಿದೆ. ಈ ವೇಳೆ ಕಸ್ತೂರಿ ರಂಗನ್ ವರದಿ, ರಾಜ್ಯದ ಬರ ಪರಿಸ್ಥಿತಿ, ಮೇಕೆದಾಟು ಯೋಜನೆ ಹಾಗೂ ರಾಜ್ಯದ ಅಭಿವೃದ್ಧಿ ವಿಚಾರಗಳು ಚರ್ಚೆಗೆ ಬಂದಿವೆ.
ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆತರುವ ಬಗ್ಗೆ ಸಿಎಂ ಡಿಕೆಶಿ, ಪ್ರಧಾನಿ ಮೋದಿ ಅವರೊಂದಿಗೆ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಸರ್ವಪಕ್ಷ ನಿಯೋಗ ಬಂದರೆ ಸಮಯ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ.

ಇದೇ ವೇಳೆ, ಅಭಿವೃದ್ಧಿ ಬೇರೆ, ರಾಜಕಾರಣ ಬೇರೆ ಎಂಬ ವಿಚಾರವನ್ನ ಡಿ.ಕೆ ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವನ್ನು ಬೆರೆಸಬಾರದು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಭಿವೃದ್ಧಿ ಮತ್ತು ರಾಜಕಾರಣ ಎರಡೂ ಬೇರೆ ಬೇರೆ. ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಮನವಿ ಸಲ್ಲಿಸಿದರೂ ಪರಿಶೀಲಿಸುವುದಾಗಿ ಹಾಗೂ ತಮ್ಮ ಸಹಕಾರ ಇರಲಿದೆ ಎಂದು ಭರವಸೆ ನೀಡಿದ್ದಾರೆ.
ಜಗತ್ತು ಇಡೀ ದೇಶವನ್ನು ಬೆಂಗಳೂರಿನ ಮೂಲಕ ನೋಡುತ್ತದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೂ ಇದೇ ಮಾತನ್ನ ಹೇಳಿದ್ದರು. ಇಂದಿಗೂ ಪರಿಸ್ಥಿತಿ ಹಾಗೆಯೇ ಇದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಮಾತುಕತೆ ವೇಳೆ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ಹಾಗೂ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ನೀವು ಯಾವುದೇ ಮನವಿ ಸಲ್ಲಿಸಿದರೂ ಅದನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಇನ್ನು ರಾಜ್ಯದ ಬಹುಚರ್ಚಿತ ಮೇಕೆದಾಟು ಯೋಜನೆ ವಿಚಾರವೂ ಮಾತುಕತೆಯಲ್ಲಿ ಪ್ರಸ್ತಾಪವಾಗಿದೆ. ಈ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
