ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಪ್ರಧಾನಿ ಮೋದಿ ಸಂತಾಪ

Public TV
2 Min Read
Maha Kumbh Mela Stampede Narendra Modi

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ (Maha Kumbh Mela Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

ಮೌನಿ ಅಮಾವಾಸ್ಯೆ ಹಿನ್ನೆಲೆ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ಸಲುವಾಗಿ ಭಕ್ತಸಾಗರವೇ ಹರಿದು ಬಂದಿತ್ತು. ಈ ವೇಳೆ ಕಾಲ್ತುಳಿತ ಉಂಟಾಗಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ – 30 ಟನ್ ಅಕ್ಕಿ ಭಸ್ಮ

ಪ್ರಕರಣದ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಮೋದಿ, ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಅಲ್ಲದೇ ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ, ನಾನು ಮುಖ್ಯಮಂತ್ರಿ ಯೋಗಿ ಜೀ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ – ಕಾರು, ಬೈಕ್‌ ಸೇರಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Share This Article