– ಹೊಸ ಮಸೂದೆ ಮಂಡನೆಗೂ ಉನ್ನತ ನಾಯಕರ ಮಹತ್ವದ ಸಭೆ
ನವದೆಹಲಿ: ನವೆಂಬರ್ 30ರಿಂದ ಸಂಸತ್ತಿನ ವಿಶೇಷ ಅಧಿವೇಶನ (Parliament Special session) ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಂವಿಧಾನದ 132ನೇ ತಿದ್ದುಪಡಿ ಮಸೂದೆಯನ್ನು ಮತ್ತೆ ಮಂಡಿಸಲು ಉದ್ದೇಶಿಸಲಾಗಿದೆ. ಇದಕ್ಕೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ (PM Modi) ಅವರು, ಕೇಂದ್ರ ಸಚಿವರು, ಬಿಜೆಪಿಯ ಉನ್ನತ ನಾಯಕರನ್ನ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
Excellent meeting with the BJP Parliamentary Party Executive Committee at 7, LKM. Had productive conversations on various subjects. https://t.co/N5zyLT7u0r
— Narendra Modi (@narendramodi) November 29, 2026
ಹೌದು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಕೇಂದ್ರದ ಪ್ರಮುಖ ಸಚಿವರಾದ ರಾಜನಾಥ್ ಸಿಂಗ್ (Rajnath Singh), ಅಮಿತ್ ಶಾ, ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಬಿಜೆಪಿ ಸಂಸದರನ್ನ ಭೇಟಿಯಾಗಿ ಮಹತ್ವದ ಸಭೆ ನಡೆಸಿದರು. ಪ್ರಧಾನಿ ಮೋದಿ ಅವರು ಸಚಿವರು ಹಾಗೂ ಸಂಸದರನ್ನ ʻಟೀ ಪಾರ್ಟಿʼ ನೆಪದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: PUBLiC TV Explainer | ದೇಶದಲ್ಲಿ ಓರ್ವ ಸಂಸದನಿಗೆ 26.3 ಲಕ್ಷ ಜನ – ಅಮೆರಿಕಕ್ಕಿಂತ 3.3 ಪಟ್ಟು ಹೆಚ್ಚು!
ಸೋಮವಾರ (ನ.30) ಲೋಕಸಭೆಯಲ್ಲಿ ಹೊಸ ಸಂವಿಧಾನ ತಿದ್ದುಪಡಿ ಮಸೂದೆಯನ್ನ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿರುವ ಹಿನ್ನೆಲೆ ಈ ಸಭೆ ಮಹತ್ವ ಪಡೆದುಕೊಂಡಿದೆ.
ನವದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆದಿದ್ದು, 30ಕ್ಕೂ ಹೆಚ್ಚು ಸಂಸದರು ಹಾಗೂ ಕೇಂದ್ರ ಸಚಿವರು ಭಾಗವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪಕ್ಷದ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿ ಮುಖ್ಯ, ಮಹಿಳಾ ಮೀಸಲಾತಿ ಬಿಲ್ ಇಂದಿನ ಅಗತ್ಯ: ಪ್ರಧಾನಿ ಮೋದಿ
ನ. 30ರಿಂದ ಸಂಸತ್ತಿನ ವಿಶೇಷ ಅಧಿವೇಶನ
ನವೆಂಬರ್ 30ರಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಂವಿಧಾನದ 132ನೇ ತಿದ್ದುಪಡಿ ಮಸೂದೆಯನ್ನು ಮತ್ತೆ ಮಂಡಿಸಲು ಉದ್ದೇಶಿಸಲಾಗಿದೆ. ಈ ಬಾರಿ ಮಸೂದೆ ಅಂಗೀಕಾರವಾಗುವ ವಿಶ್ವಾಸದಲ್ಲಿ ಕೇಂದ್ರ ಸರ್ಕಾರವಿದೆ. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ವೈಎಸ್ಆರ್ ಕಾಂಗ್ರೆಸ್ ಪಕ್ಷ, ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಮತ್ತು ಎನ್ಸಿಪಿ (ಶರದ್ ಪವಾರ್ ಬಣ) ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಮಸೂದೆಗೆ ಬೆಂಬಲ ಘೋಷಿಸಿವೆ. ಈ ಪಕ್ಷಗಳ ಬೆಂಬಲದಿಂದ ಮಸೂದೆ ಅಂಗೀಕಾರಕ್ಕೆ ಅಗತ್ಯವಿರುವ 3ನೇ ಎರಡರಷ್ಟು ಬಹುಮತ ಪಡೆಯಲು ಸರ್ಕಾರಕ್ಕೆ ನೆರವಾಗಬಹುದು ಎಂಬ ನಿರೀಕ್ಷೆಯಿದೆ.
ಆದರೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮಸೂದೆಯನ್ನ ವಿರೋಧಿಸುತ್ತಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಂದಾಗಿರುವ ಮತ್ತೊಂದು ತಂತ್ರ ಇದಾಗಿದೆ ಎಂದು ಟೀಕಿಸಿದ್ದಾರೆ.

