ಉಡುಪಿ: ಶುಕ್ರವಾರ ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನ.28ರ ಉಡುಪಿ ರೋಡ್ ಶೋ (Udupi Road Show) ಮತ್ತು ‘ಶ್ರೀ ಕೃಷ್ಣ ಮಠ ಭೇಟಿ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮೂಹಿಕ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಂಡು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಮಧ್ಯಾಹ್ನ ಗಂಟೆ 1:35ಕ್ಕೆ ಸಮಾರಂಭದ ಸ್ಥಳದಿಂದ ಹೊರಟು 1:40ಕ್ಕೆ ಆದಿಉಡುಪಿ ಹೆಲಿಪ್ಯಾಡ್ ತಲುಪಿ 1:45ಕ್ಕೆ ಎಂಐ-17 ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಿ, ಮಧ್ಯಾಹ್ನ 2:15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಗೋವಾಕ್ಕೆ ಪ್ರಯಾಣ ಮಾಡಲಿದ್ದಾರೆ.
ಉಡುಪಿಗೆ ಆಗಮಿಸುತ್ತಿರುವ ಮೋದಿ ಅವರನ್ನು ಭವ್ಯವಾಗಿ ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿ (BJP) ನೇತೃತ್ವದಲ್ಲಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಧಾನಿ ಮೋದಿ ಅವರ ‘ರೋಡ್ ಶೋ’ ಮಾರ್ಗದ ಮೂರು ಕಡೆಗಳಲ್ಲಿ ಕರಾವಳಿಯ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನ ವೇಷ, ಹುಲಿ ವೇಷ, ಶ್ರೀ ಕೃಷ್ಣ ವೇಷಧಾರಿಗಳ ಪ್ರದರ್ಶನ ಇತ್ಯಾದಿ ಇರಲಿವೆ. ರಸ್ತೆ ಮಾರ್ಗದ ಒಂದು ಕಡೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದ್ದು, ಆ ರಸ್ತೆಯ ಇಕ್ಕೆಲಗಳಲ್ಲಿ 30 ಸಾವಿರಕ್ಕೂ ಅಧಿಕ ಜನರು ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ರೋಡ್ ಶೋ ವೀಕ್ಷಣೆ ಮಾಡುವ ಸಮಸ್ತ ನಾಗರಿಕರು ನ.28 ಶುಕ್ರವಾರ ಬೆಳಿಗ್ಗೆ ಗಂಟೆ 10:30ರೊಳಗೆ ಬನ್ನಂಜೆ-ಕಲ್ಸಂಕ ರಸ್ತೆಯ ಇಕ್ಕೆಲಗಳಲ್ಲಿ ಉಪಸ್ಥಿತರಿರುವಂತೆ ಕೋರಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ 1,112 ಮತಗಟ್ಟೆಗಳ ಪ್ರತೀ ಬೂತ್‌ಗಳಿಂದ ತಲಾ 12 ಮಂದಿಯ ತಂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಬಿಜೆಪಿಯಿಂದ ಆದೇಶಿಸಲಾಗಿದೆ. ಉಡುಪಿ ನಗರ ಭಾಗದಿಂದ ಗರಿಷ್ಠ ಸಂಖ್ಯೆಯ ಜನತೆ ಭಾಗವಹಿಸಲಿದ್ದಾರೆ. ಇದನ್ನೂ ಓದಿ: 2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ
2018ರ ಬಳಿಕ ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ನೋಡುವ ಸದವಕಾಶ ಜಿಲ್ಲೆಯ ಜನತೆಗೆ ಲಭಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ. ರಾಘವೇಂದ್ರ, ಕ್ಯಾ. ಬ್ರಿಜೇಶ್ ಚೌಟ ಸಹಿತ ಜಿಲ್ಲೆಯ ಶಾಸಕರು, ರಾಜ್ಯದ ಪ್ರಮುಖ ನಾಯಕರು ಈ ಭಾವನಾತ್ಮಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ಮೋದಿ ಅಭಿಮಾನಿಗಳ ಸಹಿತ ಜಿಲ್ಲೆಯ ಮಹಾ ಜನತೆ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶ್ವ ನಾಯಕ, ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ನೇಕಾರ ಪ್ರಕೋಷ್ಠ ಸಮಿತಿ ಸದಸ್ಯ ರತ್ನಾಕರ್ ಇಂದ್ರಾಳಿ, ಜಿಲ್ಲಾ ವಕ್ತಾರ ಕೆ.ದಿವಾಕರ ಶೆಟ್ಟಿ ಕಲ್ಯಾ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿ, ಶಿವಕುಮಾರ್ ಅಂಬಲಪಾಡಿ ವಂದಿಸಿದರು.

