– ಕೆಲವರಿಗೆ ಪಕ್ಷವೇ ಮುಖ್ಯ – ವಿಪಕ್ಷಗಳ ವಿರುದ್ಧ ವಾಗ್ದಾಳಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯು (Women’s Reservation Bill) ಇಂದಿನ ಅಗತ್ಯವಾಗಿದೆ. ಆದರೆ ಕೆಲವು ರಾಜಕೀಯ ಪಕ್ಷಗಳು ದೇಶದ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.
ಇಂದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಹೋರಾಟ ಹಲವು ದಶಕಗಳಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.
भारत की प्रगति, नारीशक्ति के सपनों की उड़ान… https://t.co/pSBPebrlEW
— Narendra Modi (@narendramodi) November 29, 2026
ಮಹಿಳಾ ಸಬಲೀಕರಣಕ್ಕೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ (NDA Govt) ಬದ್ಧವಾಗಿದೆ. ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ನಮ್ಮ ಸಂಕಲ್ಪ ಅಚಲವಾಗಿದೆ. ದೇಶದ ಹಿತಾಸಕ್ತಿಯೇ ನಮಗೆ ಮುಖ್ಯ. ಆದರೆ ಕೆಲವು ಪಕ್ಷಗಳಿಗೆ ಪಕ್ಷದ ಹಿತಾಸಕ್ತಿಯೇ ದೊಡ್ಡದಾಗಿದೆ. ಇದರಿಂದ ಮಹಿಳೆಯರು ಮತ್ತು ದೇಶವೇ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಮೋದಿ ಎಚ್ಚರಿಸಿದ್ದಾರೆ.
ಮಹಿಳೆಯರ ಕನಸುಗಳನ್ನು ನನಸಾಗಿಸಲು ಮತ್ತು ದೇಶದ ಭವಿಷ್ಯವನ್ನು ಉತ್ತಮಗೊಳಿಸಲು ʻನಾರಿ ಶಕ್ತಿ ವಂದನ್ʼ ಅಧಿನಿಯಮ ಜಾರಿಗೆ ತರುವುದು ಅತ್ಯಗತ್ಯ. ದೇಶದ ಅರ್ಧದಷ್ಟು ಜನಸಂಖ್ಯೆಯಾಗಿರುವ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಸಂಕಲ್ಪವನ್ನ ಈಡೇರಿಸಬೇಕು ಎಂದು ಅವರು ತಿಳಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸಿದ್ಧತೆ
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸಂವಿಧಾನದ 132ನೇ ತಿದ್ದುಪಡಿ ಮಸೂದೆ, 2026 ಅನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ.
ಇದರ ಜೊತೆಗೆ ಲೋಕಸಭೆ ಮತ್ತು ವಿಧಾನಸಭೆಗಳ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಹಾಗೂ 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆಗೆ ತಡೆ ನೀಡುವ ಪ್ರಸ್ತಾವನೆಯೂ ಮಸೂದೆಯಲ್ಲಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಸೂದೆಗಳನ್ನ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಮಸೂದೆಗಳ ಅಂಗೀಕಾರಕ್ಕೆ ಸಹಕರಿಸುವಂತೆ ಕೇಂದ್ರ ಸರ್ಕಾರ ವಿಪಕ್ಷಗಳಲ್ಲಿ ಮನವಿ ಮಾಡಿದೆ.
ಆದರೆ, ಕಾಂಗ್ರೆಸ್ ಈ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈ ಮಸೂದೆಯ ಮೂಲಕ ಚುನಾವಣೆಗಳಲ್ಲಿ ಅಕ್ರಮವಾಗಿ ಲಾಭ ಪಡೆಯಲು ಮತ್ತು ಬಿಜೆಪಿ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

