ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ನನ್ನು (Darshan) ನೋಡಲು ಪೊಲೀಸ್ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಿಸಿ ಕೊಲೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ. ನೆಚ್ಚಿನ ನಟನನ್ನು ನೋಡಲು ಠಾಣೆ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಇದನ್ನೂ ಓದಿ: ಕೈ ನಡುಗುತ್ತಿದೆ, ದಯಮಾಡಿ ಒಂದು ಸಿಗರೇಟ್ ಕೊಡಿಸಿ – ಪೊಲೀಸರ ಬಳಿ ದರ್ಶನ್ ಮನವಿ!
ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲು ಸಿದ್ಧತೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಠಾಣೆ ಮುಂದೆ ಅಪಾರ ಸಂಖ್ಯೆಯಲ್ಲಿ ನೆರೆದಿರುವುದರಿಂದ ಪೊಲೀಸರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರನ್ನೂ ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದರು. ಎಲ್ಲರನ್ನೂ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿತು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಆರೋಪಿ ನಂದೀಶ್ ಕುಟುಂಬಸ್ಥರ ಕಣ್ಣೀರು
ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.