ಚಾಮರಾಜನಗರ: ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಚಾಮರಾಜನಗರ (Chamarajanagar) ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ನಿಲುವು ತಾಳಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದ ಹೊಳೆಮುರಿದಟ್ಟಿ ಮತ್ತು ಕರಿಕಲ್ಲು ಗುಡ್ಡದಲ್ಲಿ ಆ.15ರಂದು ಶೂಟೌಟ್ ನಡೆದ ಬಗ್ಗೆ ಹನೂರಿನಲ್ಲಿ ಮಾತನಾಡಿದರು. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು, ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ನಾವು ನಿರಂತರವಾಗಿ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಮಾಡುತ್ತಿದ್ದೇವೆ. ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಹಾಗೂ ಸುಳ್ಳುಸುದ್ದಿ ಹಬ್ಬಿಸುವವರ ವಿರುದ್ಧ ಪರಿಶೀಲನೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹನೂರು ಎನ್‌ಕೌಂಟರ್ ಪ್ರಕರಣ ಸಿಐಡಿಗೆ ಹಸ್ತಾಂತರ
ʻಟೈಗರ್ ಆಫ್ ಜಸ್ಟಿಸ್’ ಹೆಸರಿನ ವಾಟ್ಸಪ್ ಗ್ರೂಪ್ ಸೇರಿದಂತೆ ಕೆಲವು ಗ್ರೂಪ್‌ಗಳಲ್ಲಿ ನಡೆಯುತ್ತಿರುವ ಚರ್ಚೆಗಳು ಪೊಲೀಸರ ಗಮನಕ್ಕೆ ಬಂದಿದ್ದು, ಅದರ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಅಲ್ಲದೇ “ಕರ್ನಾಟಕ ಸರ್ಕಾರ ತಮಿಳರನ್ನು ನಿರ್ಲಕ್ಷ್ಯ ಮಾಡುತ್ತಿದೆ” ಎಂಬ ಆಡಿಯೋ ಸಂದೇಶಗಳು ಕೆಲವು ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವ ಬಗ್ಗೆಯೂ ಮಾಹಿತಿ ಇದೆ. ಉದ್ದೇಶಪೂರ್ವಕವಾಗಿ ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಸಂದೇಶ ಹಾಕಿದರೂ ಅದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಬಿಜೆಪಿಗೆ ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ; ಕೆಲವು ಮಹತ್ವದ ದಾಖಲೆ ಕೊಡ್ತೇವೆಂದ ಸಮಿತಿ ಸದಸ್ಯ ವೆಂಕಟೇಶ್
ತಲೆಮರೆಸಿಕೊಂಡ ಆರೋಪಿ ಪತ್ತೆಗೆ ವಿಶೇಷ ತಂಡ:
ಗೋವಿಂದ ಅಲಿಯಾಸ್ ಗೋವಿಂದರಾಜು ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು. ಈತನ ಬಂಧನದ ನಂತರ ಮುಂದಿನ ಕ್ರಮ ವಹಿಸಲಾಗುವುದು.
ಈಗಾಗಲೇ ಶೂಟ್‌ಔಟ್ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಸಲೀಂರವರು ಸಿಐಡಿ ತನಿಖೆಗೆ ವಹಿಸಿದ್ದು, ಎಲ್ಲ ದಾಖಲೆಗಳನ್ನು ಇದುವರೆಗೂ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಿದ ತನಿಖಾಧಿಕಾರಿಗಳು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದಿದ್ದಾರೆ.ಇದನ್ನೂ ಓದಿ: ಹನೂರು ಶೂಟೌಟ್ ಕೇಸ್ | ಹತ್ತಿರದಿಂದಲೇ ಗುಂಡು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?
