– ಎಚ್ಚೆತ್ತುಕೊಳ್ಳದ ಆರೋಗ್ಯ ಇಲಾಖೆ
ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ದೇವರಭೂಪುರ ಗ್ರಾಮದ ವಾಂತಿ ಭೇದಿ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಸಮರ್ಪಕ ಚಿಕಿತ್ಸೆ ಸಿಗದೆ ಓರ್ವ ಸಾವನ್ನಪ್ಪಿದ್ದಾರೆ.
ಗ್ರಾಮದ ಮಲ್ಲಪ್ಪ ಗುರಗುಂಟಾ (52) ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಮೃತ ವ್ಯಕ್ತಿಯ ಕುಟುಂಬಸ್ಥರು ವೈದ್ಯರಿಗೆ ತರಾಟೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಆದರೆ ಅಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಚಿಕಿತ್ಸಾ ಸೌಲಭ್ಯಗಳೂ ಇಲ್ಲ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿನ ತಾಲೂಕಾಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥರಾಗುತ್ತಿದ್ದಾರೆ. ಮೂರು ದಿನಗಳಿಂದ ಜನ ನರಳಾಡುತ್ತಿದ್ದರೂ ಗ್ರಾಮದಲ್ಲಿ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ.
Advertisement
ಬೇಸಿಗೆ ಆರಂಭದಲ್ಲೇ ಗ್ರಾಮದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಬಾವಿ ಹಾಗೂ ಕಾಲುವೆಯ ಕಲುಷಿತ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಮಲ್ಲಪ್ಪ ಸಾವನ್ನಪ್ಪುತ್ತಿರಲಿಲ್ಲ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಗ್ರಾಮದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು, ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಅಂತ ದೇವರಭೂಪುರ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.