ಗದಗ: ಕರ್ನಾಟಕ ರಾಜ್ಯ ಪೊಲೀಸ್ (Karnataka Police) ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಹಾಗೂ ಸ್ಥಳೀಯ ವೃಂದದ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳ (Gadag Recruitment) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಸಲಿದೆ. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೊಲೀಸ್ ಕಾನ್ಸಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಪರೀಕ್ಷಾ ಕೊಠಡಿಯೊಳಗೆ ಪರೀಕ್ಷಾ ಪ್ರಾಧಿಕಾರದ ನಿಯಮಗಳು ಉಲ್ಲಂಘನೆಯಾಗದಂತೆ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.ಇದನ್ನೂ ಓದಿ: ಆ.2ಕ್ಕೆ ಕಾನ್‌ಸ್ಟೇಬಲ್ ಪರೀಕ್ಷೆ| 3,991 ಹುದ್ದೆಗೆ ಬರೆಯುತ್ತಿದ್ದಾರೆ 4.54 ಲಕ್ಷ ಅಭ್ಯರ್ಥಿಗಳು!
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು ಹಾಗೂ ಸೂಕ್ತ ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಮಾತನಾಡಿ, ಗದಗ ಜಿಲ್ಲೆಯಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸುಮಾರು 3,575 ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ರಕ್ತಸಿಕ್ತ ಸಮವಸ್ತ್ರ, ಹಲ್ಲೆಯಿಂದ ತಲೆಗೆ ಹೊಲಿಗೆ: ಜಂತರ್ ಮಂತರ್‌ನಲ್ಲಿ ಪೊಲೀಸರ ಮೇಲಾದ ದೌರ್ಜನ್ಯದ ಬಗ್ಗೆ ಕುಟುಂಬಸ್ಥರ ನೋವಿನ ನುಡಿ
