– 75ನೇ ಗಣರಾಜ್ಯೋತ್ಸವಕ್ಕೂ ಮುನ್ನ ದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮಾತು
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 75 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು (ಬುಧವಾರ) ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದು ಯುಗ ಬದಲಾವಣೆಯ ಅವಧಿಯಾಗಿದೆ ಆಶಯ ವ್ಯಕ್ತಪಡಿಸಿದ್ದಾರೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಮತ್ತು ಮಹತ್ವದ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಭವಿಷ್ಯದ ಇತಿಹಾಸಕಾರರು ಭಾರತದ ನಾಗರಿಕತೆಯ ಪರಂಪರೆಯ ಮರು ಅನ್ವೇಷಣೆಯಲ್ಲಿ ಹೆಗ್ಗುರುತಾಗಿ ನೋಡುತ್ತಾರೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ದೇವಾಲಯದ ನಿರ್ಮಾಣವು ಪ್ರಾರಂಭವಾಯಿತು. ಈಗ ಅದು ಭವ್ಯ ಸೌಧವಾಗಿ ನಿಂತಿದೆ. ಇದು ಜನರ ನಂಬಿಕೆಗೆ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುತ್ತದೆ. ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ಅಗಾಧ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ಪೂರಿ ಜೀ ಅವರ ಕೊಡುಗೆಯಿಂದ ಸಾರ್ವಜನಿಕ ಜೀವನವನ್ನು ಶ್ರೀಮಂತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಅವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.
1988 ರಲ್ಲಿ ನಿಧನರಾದ ಎರಡು ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರು ಬಡವರು ಮತ್ತು ಹಿಂದುಳಿದ ವರ್ಗಗಳ ಉನ್ನತಿಗೆ ನೀಡಿದ ಕೊಡುಗೆಗಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
ಜ.22 ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪನೆ ನೆರವೇರಿತು.