ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಲ್‌ನಲ್ಲಿ ಕೆಎಸ್‌ಆರ್‌ಟಿಸಿ (KSRTC ) ಹೊಸ ಬಸ್ ಮಾರ್ಗಕ್ಕೆ ಚಾಲನೆ ನೀಡುವ ವೇಳೆ ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರು ಆಕ್ಷೇಪ ವ್ಯಕ್ತಪಡಿಸಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ತೀರ್ಥಹಳ್ಳಿ–ರಿಪ್ಪನ್‌ಪೇಟೆ–ಸಾಗರ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸಬೇಕು ಎಂಬುದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿತ್ತು. ಅದರಂತೆ ಇಂದು ಹೊಸನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಅಧಿಕೃತ ಚಾಲನೆ ನೀಡಲಾಯಿತು.

ಬಸ್ ಸೇವೆ ಆರಂಭವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಕೆಲ ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರು, ಕೆಎಸ್‌ಆರ್‌ಟಿಸಿ ಬಸ್‌ಗಳ ಪರ್ಮಿಟ್ ಮತ್ತು ಸಂಚಾರ ಸಮಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದರು.ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ತಳ್ಳಾಟ-ನೂಕಾಟದ ವಾತಾವರಣ ಉಂಟಾಯಿತು. ಸ್ಥಳದಲ್ಲಿದ್ದ ಹೊಸನಗರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಸೇರಿದಂತೆ ಹಲವು ಮುಖಂಡರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಆದರೆ, ಖಾಸಗಿ ಬಸ್ ಪ್ರತಿನಿಧಿಗಳು ತಮ್ಮ ವಾದ ಮುಂದುವರಿಸಿದ್ದರಿಂದ ಗೊಂದಲ ಹೆಚ್ಚಾಯಿತು.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಖಾಸಗಿ ಬಸ್ ಪ್ರತಿನಿಧಿಗಳು ಮತ್ತು ಮುಖಂಡರೊಂದಿಗೆ ಸಭೆ ನಡೆಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಿದರು.ಇದನ್ನೂ ಓದಿ: ರಾಯರ ಭಕ್ತರಿಗಾಗಿ ಮಂತ್ರಾಲಯದಲ್ಲಿ ಇಂಪೌಂಡಿಂಗ್ ಜಲಾಶಯ ನಿರ್ಮಾಣ: ಸುಬುಧೇಂದ್ರ ತೀರ್ಥರಿಂದ ಭೂಮಿಪೂಜೆ
