ಬಲವಂತವಾಗಿ ಪೋಷಕರಿಂದ ಶುಲ್ಕ ವಸೂಲು ಮಾಡುವಂತಿಲ್ಲ – ಖಾಸಗಿ ಶಾಲೆಗಳಿಗೆ ಖಡಕ್ ಸೂಚನೆ

Public TV
1 Min Read
school bags 2

ಬೆಂಗಳೂರು: ಆರ್ಥಿಕವಾಗಿ ಸಮರ್ಥರಿರುವ ಪೋಷಕರು ಸ್ವಯಂಪ್ರೇರಿತವಾಗಿ ತಮ್ಮ ಮಕ್ಕಳ ಶಾಲಾ ಶುಲ್ಕ ಕಟ್ಟಿಲು ಮುಂದಾದರೆ, ಶುಲ್ಕ ವಸೂಲಾತಿಗೆ ಖಾಸಗಿ ಶಾಲೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ನಿರ್ದೇಶನವನ್ನು ಹೊರಡಿಸುವಂತೆ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಕೋವಿಡ್-19 ಲಾಕ್‍ಡೌನ್ ಅವಧಿಯ ಅನಿಶ್ಚಿತತೆಯು ಅನಿರ್ದಿಷ್ಟಾವಧಿಯವರೆಗೆ ಮುಂದುವರೆಯುತ್ತಿರುವುದರಿಂದ ತಮ್ಮ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಕೂಡಾ ತೊಂದರೆಯುಂಟಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅನುಕೂಲ ಮಾಡಿಕೊಡುವಂತೆ ಹಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿಗಳನ್ನು ಸಲ್ಲಿಸಿದ್ದವು.

private school fees notification

ಈ ಹಿನ್ನೆಲೆಯಲ್ಲಿ ಯಾವ ಪೋಷಕರು ತಮ್ಮ ಮಕ್ಕಳ ಬೋಧನಾ ಶುಲ್ಕವನ್ನು ಕಟ್ಟಲು ಆರ್ಥಿಕವಾಗಿ ಸಮರ್ಥರಿದ್ದಾರೋ, ಯಾವ ಪೋಷಕರು ಸ್ವಯಂಪ್ರೇರಿತರಾಗಿ ಶುಲ್ಕ ಪಾವತಿಗೆ ಮುಂದಾಗುತ್ತಾರೋ ಅಂತಹ ಪೋಷಕರಿಂದ ಅವರು ಇಚ್ಛಿಸುವ ಸಂಖ್ಯೆಯ ಕಂತುಗಳಲ್ಲಿ ಶುಲ್ಕ ವಸೂಲಾತಿಗೆ ಖಾಸಗಿ ಶಾಲೆಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಶಿಕ್ಷಣ ಕಾಯ್ದೆಯ ಅವಕಾಶಗಳ ಅಡಿಯಲ್ಲಿ ಈ ನಿರ್ದೇಶನವನ್ನು ಹೊರಡಿಸುವಂತೆ ಸಚಿವರು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.

Delhi school copy

ಯಾವ ಪೋಷಕರು ತಮ್ಮ ಮಕ್ಕಳ ಶುಲ್ಕವನ್ನು ಕಟ್ಟಲು ಅಸಹಾಯಕರೋ, ಸದ್ಯಕ್ಕೆ ತಮಗೆ ಸಾಧ್ಯವಿಲ್ಲವೆಂದು ನಿರಾಕರಿಸುತ್ತಾರೋ ಅಂತಹವರಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವ ಹಾಗಿಲ್ಲ. ಒಂದು ವೇಳೆ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುತ್ತೆ. ಪೋಷಕರು ನೀಡುವ ಹಣವನ್ನು ಈ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಬಳಸಿಕೊಳ್ಳಲು ಪ್ರಥಮ ಆದ್ಯತೆಯನ್ನು ನೀಡಬೇಕು. ಅಲ್ಲದೇ ಈ ಅಂಶವನ್ನು ಶಿಕ್ಷಣ ಇಲಾಖೆಯ ನಿರ್ದೇಶನದಲ್ಲಿ ಸ್ಪಷ್ಟಪಡಿಸಬೇಕೆಂಬ ಸೂಚನೆಯನ್ನು ಸಹ ಸುರೇಶ್ ಕುಮಾರ್ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *