ಲಕ್ನೋ: ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಮತರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ದೂರಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸ್ಮೃತಿ ಇರಾನಿಯವರು ತಮ್ಮ ಕ್ಷೇತ್ರದಲ್ಲಿ ಮಾಧ್ಯಮಗಳ ಮುಂದೆಯೇ ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ, ಇದು ತಪ್ಪು. ಅಮೇಥಿಯ ಜನರು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ರಾಯ್‍ಬರೇಲಿ ಹಾಗೂ ಅಮೇಥಿಗೆ ನಾನು ಸಾಕಷ್ಟು ಬಾರಿ ಬಂದಿದ್ದೇನೆ. ಇಲ್ಲಿನ ಜನರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ : ಅಣ್ಣ ತಂಗಿಯರ ಅನುಬಂಧಕ್ಕೆ ತಾಜಾ ಉದಾಹರಣೆಯಾದ್ರು ರಾಹುಲ್-ಪ್ರಿಯಾಂಕ ಗಾಂಧಿ
Advertisement
Advertisement
ಬಿಜೆಪಿಯವರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಜನರನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ. ಇಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ಸಮಸ್ಯೆಗಳು ಸ್ಪಷ್ಟವಾಗಿ ಕಾಣುತ್ತವೆ. ಈ ಬಗ್ಗೆ ಕಾಳಜಿವಹಿಸಿ ಪರಿಹಾರ ಕಂಡುಕೊಳ್ಳುವುದು ಸರ್ಕಾರ ಜವಾಬ್ದಾರಿ. ಆದರೆ ಬಿಜೆಪಿ ನಾಯಕರು ಜನರ ಸಮಸ್ಯೆಗಳನ್ನ ಆಲಿಸುತ್ತಿಲ್ಲ ಎಂದು ದೂರಿದರು.
Advertisement
ಅಮೇಥಿ ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಾಗಿದೆ. 1967ರಿಂದ 2014ರ ವರೆಗೆ ನಡೆದ ಲೋಕಸಭಾ ಚುನಾವಣೆ ಹಾಗೂ ಉಪ ಚುನಾವಣೆಗಳ ಪೈಕಿ ಎರಡು ಬಾರಿ ಮಾತ್ರ ಕಾಂಗ್ರೆಸ್ ಪರಾಜಯಗೊಂಡಿದೆ. ಅಷ್ಟೇ ಅಲ್ಲದೆ ಈ ಕ್ಷೇತ್ರದಿಂದ 2009 ಹಾಗೂ 2014 ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಜಯಗಳಿಸಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಭದ್ರಕೋಟೆ ಒಡೆಯಲು ಬಿಜೆಪಿ ಮುಂದಾಗಿದೆ.
Advertisement
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸ್ಮೃತಿ ಇರಾನಿ ಅವರು ಸುಮಾರು 1 ಲಕ್ಷ ಮತಗಳ ಅಂತರದಿಂದ ಪರಾಜಿತಗೊಂಡಿದ್ದರು. ಆದರೆ ಉತ್ತರ ಪ್ರದೇಶದ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಸರ್ಕಾರ ರಚಿಸಿದೆ. ಇತ್ತ ಅಮೇಥಿ ಲೋಕಸಭಾ ವ್ಯಾಪ್ತಿಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಜಯಗಳಿಸಿದೆ. ಈ ಎಲ್ಲ ಬೆಳವಣಿಗೆಯಿಂದಾಗಿ ಸ್ಮೃತಿ ಇರಾನಿ ಅವರು ಈ ಬಾರಿ ಗೆಲ್ಲುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.