– ತುಂಗಭದ್ರಾ ಯೋಜನೆಗೆ ಅನುದಾನ ಬಿಡುಗಡೆಗೆ ಪ್ರಧಾನಿ ಭರವಸೆ
– 26,000 ಕೋಟಿ ಬೆಳೆ ನಷ್ಟ ಪರಿಹಾರ ಕೇಳಿದ ಸಿಎಂ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ನಡುವಿನ ಮಾತುಕತೆ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಬೆಂಗಳೂರು To ಮೈಸೂರು ಹೆಲಿಕಾಪ್ಟರ್ ಪ್ರಯಾಣದ ವೇಳೆ ಪ್ರಧಾನಿ ಮೋದಿ ಹಾಗೂ ಸಿಎಂ ಡಿಕೆಶಿ ನಡುವಿನ ಮಾತುಕತೆಯ ಬಗ್ಗೆ ʻಪಬ್ಲಿಕ್ ಟಿವಿʼ (Public tv) ಎಕ್ಸ್ಕ್ಲೂಸಿವ್ ವರದಿ ಮಾಡಿದೆ.
ರಾಜ್ಯದ ಬರ ಪರಿಸ್ಥಿತಿ, ಬರ ಪರಿಹಾರ, ಮೇಕೆದಾಟು ಯೋಜನೆ, ತುಂಗಭದ್ರಾ ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಗೆ (Narendra Modi) ಮನವಿ ಸಲ್ಲಿಸಿದ್ದಾರೆ.
85 ಲಕ್ಷ ಎಕರೆ ಬೆಳೆ ನಾಶ, 65 ಸಾವಿರ ಕೋಟಿ ರೂ. ನಷ್ಟ!
ಎಲ್ನಿನೋ ಪರಿಣಾಮದಿಂದ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೇ ತೀವ್ರ ಬರ ಪರಿಸ್ಥಿತಿ ಎದುರಾಗಿದೆ. ಇದರಿಂದ ರಾಜ್ಯದಲ್ಲಿ ಸುಮಾರು 85 ಲಕ್ಷ ಎಕರೆ ಪ್ರದೇಶದ ಬೆಳೆ ನಾಶವಾಗಿದ್ದು, ಒಟ್ಟು 65 ಸಾವಿರ ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಸಿಎಂ ಪ್ರಧಾನಿಗಳ ಗಮನಕ್ಕೆ ತಂದಿದ್ದಾರೆ. ಎನ್ಡಿಆರ್ಎಫ್ ನಿಯಮಗಳ ಪ್ರಕಾರ ರಾಜ್ಯಕ್ಕೆ ಸುಮಾರು 26 ಸಾವಿರ ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ್ದಾರೆ.

ಮೇಕೆದಾಟು, ತುಂಗಭದ್ರಾ ಯೋಜನೆಗಳ ಬಗ್ಗೆ ಪ್ರಸ್ತಾಪ
ಇನ್ನೂ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು ಮತ್ತು ತುಂಗಭದ್ರಾ ಯೋಜನೆಗಳ ಬಗ್ಗೆಯೂ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಧಾನಿ ಮೋದಿ, ಈ ವಿಚಾರಗಳನ್ನ ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ತುಂಗಭದ್ರಾ ಯೋಜನೆಗೆ ಅನುದಾನ ಬಿಡುಗಡೆ ಭರವಸೆ
ತುಂಗಭದ್ರಾ ಯೋಜನೆಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆ ಮಾಡುವ ಕುರಿತು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸೂಚನೆ ನೀಡುವುದಾಗಿ ಪ್ರಧಾನಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಹಿಂದಿನ ಬಜೆಟ್ನಲ್ಲಿ ಘೋಷಣೆಯಾಗಿದ್ದ ಅನುದಾನ ಬಿಡುಗಡೆ ಬಗ್ಗೆಯೂ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಆಪ್ತ ಮೂಲಗಳನ್ನಾಧರಿಸಿ ʻಪಬ್ಲಿಕ್ ಟಿವಿʼ ವರದಿ ಮಾಡಿದೆ.
ಕಸ್ತೂರಿ ರಂಗನ್ ವರದಿ ಬಗ್ಗೆಯೂ ಚರ್ಚೆ
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದ ಜನರ ಮೇಲೆ ಪರಿಣಾಮ ಬೀರುವ ಕಸ್ತೂರಿ ರಂಗನ್ ವರದಿಯ ಬಗ್ಗೆಯೂ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರ ಗಮನ ಸೆಳೆದಿದ್ದಾರೆ.
