ಜಂಬೂ ಸವಾರಿ ಇಲ್ಲದೆ ಮೈಸೂರು ದಸರಾವನ್ನು (Mysuru Dasara) ಕಲ್ಪಿಸಿಕೊಳ್ಳುವುದೇ ಕಷ್ಟ. ಶತಮಾನಗಳ ಇತಿಹಾಸ, ರಾಜವೈಭವ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯೇ ಜಂಬೂ ಸವಾರಿ. ಅದರಲ್ಲೂ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗುವ ದಸರಾ ಆನೆಗಳು ಜಂಬೂ ಸವಾರಿಗೆ ವಿಶೇಷ ಮೆರುಗು ನೀಡುತ್ತವೆ.
ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಿಂದ ನಡೆದುಕೊಂಡು ಬಂದಿರುವ ಅಂಬಾರಿ ಹೊರುವ ಪರಂಪರೆ, ರಾಜಾಡಳಿತ ಅಂತ್ಯಗೊಂಡ ಬಳಿಕವೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ. ಕಾಲ ಬದಲಾದರೂ, ರಾಜವೈಭವದ ಆ ಪರಂಪರೆಯನ್ನು ದಸರಾ ಜಂಬೂ ಸವಾರಿ ಇಂದಿಗೂ ಜೀವಂತವಾಗಿರಿಸಿದೆ.
ಈ ಪರಂಪರೆಯ ಹಿಂದೆ ಸಾಗಿಬಂದ ಆನೆಗಳ (Dasara Elephants) ಇತಿಹಾಸವೂ ಅಷ್ಟೇ ರೋಚಕ. ಹಲವು ದಶಕಗಳ ಕಾಲ ಅಂಬಾರಿ ಹೊತ್ತು ಜಂಬೂ ಸವಾರಿಯ ಕೇಂದ್ರಬಿಂದುವಾಗಿ ನಿಂತಿದ್ದ ಗಜರಾಜರು ಮೈಸೂರು ದಸರೆಯ ಇತಿಹಾಸದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಶಕ್ತಿ, ಶಿಸ್ತು, ಗಾಂಭೀರ್ಯ ಮತ್ತು ತರಬೇತಿ ಜಂಬೂ ಸವಾರಿಯನ್ನು ಮತ್ತಷ್ಟು ವೈಭವಮಯವಾಗಿಸಿವೆ. ಈ ಐತಿಹಾಸಿಕ ಪರಂಪರೆಯ ಸಾಲಿನಲ್ಲಿ ಇಂದು ಅಭಿಮನ್ಯು ಪ್ರಮುಖ ಸ್ಥಾನದಲ್ಲಿದ್ದಾನೆ. ಕಳೆದ 6 ವರ್ಷಗಳಿಂದ ದಸರಾ ಜಂಬೂ ಸವಾರಿಯ ಕ್ಯಾಪ್ಟನ್ ಆಗಿ ಅಂಬಾರಿ ಹೊತ್ತು ಸಾಗಿರುವ ಅಭಿಮನ್ಯು (Abhimanyu Elephant), ತನ್ನದೇ ಆದ ಅಭಿಮಾನಿ ಬಳಗ ಹೊಂದಿದ್ದಾನೆ.

ಅಂಬಾರಿಯ ಭಾರ ಹೊತ್ತು ಸಾವಿರಾರು ಜನರ ನಡುವೆ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಅಭಿಮನ್ಯುವಿನ ದೃಶ್ಯವೇ ಮೈಸೂರು ದಸರೆಯ ಅವಿಭಾಜ್ಯ ಭಾಗವಾಗಿದೆ. ಆದರೆ, ಕಾಲ ಯಾರನ್ನೂ ಕಾಯುವುದಿಲ್ಲ. ದಶಕಗಳಿಂದ ಅಂಬಾರಿ ಹೊತ್ತಿರುವ ಅಭಿಮನ್ಯುವಿನ ನಂತರ ಈ ಮಹತ್ವದ ಜವಾಬ್ದಾರಿಯನ್ನು ಮತ್ತೊಂದು ಆನೆಗೆ ಹಸ್ತಾಂತರಿಸುವ ಕಾಲವೂ ಇದೀಗ ಸಮೀಪಿಸುತ್ತಿದೆ. ಹೀಗಾಗಿ, ಅಭಿಮನ್ಯುವಿನ ಯುಗ ಅಂತ್ಯಗೊಂಡಿದ್ದು, ಮೈಸೂರು ದಸರೆಯ ಅಂಬಾರಿ ಆನೆಗಳ ಇತಿಹಾಸದಲ್ಲಿ ಮತ್ತೊಂದು ಅಧ್ಯಾಯ ಆರಂಭವಾಗಲಿದೆ.
ಮೈಸೂರು ದಸರಾ ಜಂಬೂಸವಾರಿಯ ಚಿನ್ನದ ಅಂಬಾರಿಯನ್ನು ಈ ಬಾರಿ ಯಾವ ಆನೆ ಹೊರುತ್ತದೆ ಎಂಬ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳುವ ಸಮಯ ಸಮೀಪಿಸುತ್ತಿದೆ. ಹಾಗಾಗಿ 6 ಬಾರಿ ಅಂಬಾರಿ ಹೊತ್ತ ಅಭಿಮನ್ಯು ಇತಿಹಾಸ ಪುಟ ಸೇರಿಕೊಳ್ಳಲಿದ್ದಾನೆ. ಈ ಬಗ್ಗೆ ಇನ್ನಷ್ಟು ಕುತೂಹಲ ಸಂಗತಿಗಳನ್ನು ತಿಳಿಯುವ ಆಸಕ್ತಿ ನಿಮಗಿದ್ದರೆ ಮುಂದೆ ಓದಿ…
ಮುಗಿಯಿತು ʻಅಭಿಮನ್ಯು ಯುಗʼ
ದಸರಾಗೂ ಆನೆಗಳಿಗೂ ಶತಮಾನದ ನಂಟು ಇದೆ. ಎಲ್ಲೆಡೆ ಹೊಸ ಪೀಳಿಗೆ ಪ್ರವೇಶಿಸಿದಂತೆ ಮೈಸೂರಿನ ಆನೆಗಳಲ್ಲೂ ಬದಲಾವಣೆ ಆಗುತ್ತಿದೆ. ಆದ್ರೆ ಈಗ ಇರುವ ಹಳೆಯ ಆನೆಗಳ ಪೈಕಿ ಅಭಿಮನ್ಯುನೇ ಹಿರಿಯ. ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಯ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟ ಆನೆಗಳನ್ನು ಕಠಿಣ ಕೆಲಸಗಳಿಗೆ ಅಥವಾ ಭಾರ ಹೊರುವ ಕಾರ್ಯಗಳಿಗೆ ಬಳಸುವಂತಿಲ್ಲ. 61 ವರ್ಷದ ಅಭಿಮನ್ಯು ಈ ವಯೋಮಿತಿ ಮೀರಿರುವ ಹಿನ್ನೆಲೆ ಈ ಬಾರಿಯ ದಸರಾ ಆನೆಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಇದೀಗ ಚಿನ್ನದ ಅಂಬಾರಿ ಹೊರುವ ಗೌರವಕ್ಕಾಗಿ ದುಬಾರೆ ಸಾಕಾನೆ ಶಿಬಿರದ 46 ವರ್ಷದ ಧನಂಜಯ ಮತ್ತು 54 ವರ್ಷದ ಪ್ರಶಾಂತ ಆನೆಯ ನಡುವೆ ಪೈಪೋಟಿ ಆರಂಭವಾಗಿದೆ.

ಅಭಿಮನ್ಯು ಕ್ಯಾಪ್ಟನ್ ಆದ ಕಥೆಯೇ ರೋಚಕ
1951ರ ಸಮಯದಲ್ಲಿ ಸುರ್ಗುಜಾ ಮಧ್ಯಪ್ರದೇಶದ ಭಾಗವಾಗಿತ್ತು. ಆದ್ರೆ 2000 ಇಸವಿಯ ನಂತರ ಛತ್ತಿಸ್‌ಘಡದ ಜಿಲ್ಲೆಯಾಗಿ ಸೇರ್ಪಡೆಯಾಯಿತು. ಈ ಸ್ಥಳಕ್ಕೂ ನಮ್ಮ ಕರ್ನಾಟಕಕ್ಕೂ ನಂಟು ಇದೆ. ಅದು ಹೇಗೆ ಅಂತೀರಾ..? ಈ ಹಿಂದೆ ಸುಮಾರು 3 ದಶಕಗಳ ಕಾಲ ಸರ್ಗುಜಾದಲ್ಲಿ ಆನೆಗಳ ಹಾವಳಿ ಮಿತಿ ಮೀರಿತ್ತು. ಆನೆಗಳನ್ನ ಸೆರೆ ಹಿಡಿಯಬೇಕು, ಉಪಟಳ ತಪ್ಪಿಸಬೇಕು ಅನ್ನೋ ಕೂಗು ಸರ್ಗುಜಾ ಭಾಗದಲ್ಲಿ ಜೋರಾಗಿತ್ತು. ಸ್ಥಳೀಯರ ಒತ್ತಡಕ್ಕೆ ಮಣಿದ ಅಂದಿನ ಮಧ್ಯಪ್ರದೇಶದ ರಾಜ್ಯ ಸರ್ಕಾರ ಆನೆಗಳನ್ನ ಸೆರೆ ಹಿಡಿಯೋದಕ್ಕೇನೋ ಅನುಮತಿ ನೀಡಿತು. ಆದ್ರೆ ಅವುಗಳನ್ನ ಸೆರೆ ಹಿಡಿಯುವ ಕಾರ್ಯಾಚರಣೆ ಅಷ್ಟು ಸುಲಭವಾಗಿರಲಿಲ್ಲ. ಆಗ ಮಧ್ಯಪ್ರದೇಶದ ಚಿತ್ತ ಹಾಯಿಸಿದ್ದು, ಕರ್ನಾಟಕದತ್ತ. ಖೆಡ್ಡಕ್ಕೆ ಕೆಡವುವ ಕಾರ್ಯಾಚರಣೆಯಲ್ಲಿ ಕರ್ನಾಟಕದ ಆನೆಗಳು ಆಗಲೇ ಬಲಶಾಲಿಗಳಾಗಿ ಗುರುತಿಸಿಕೊಂಡಿದ್ದವು. ಇಲ್ಲಿಂದ ಆನೆಗಳನ್ನ ಕರೆದುಕೊಂಡು ಬಂದು ಆನೆಗಳನ್ನ ಸೆರೆಹಿಡಿಯುವ ತೀರ್ಮಾನಕ್ಕೆ ಅಲ್ಲಿನ ಸರ್ಕಾರ ಮುಂದಾಯಿತು. ಅದರಂತೆ ಇಂದಿನ ಅಂಬಾರಿ ಹೊರುವ ಕ್ಯಾಪ್ಟನ್ ಅಭಿಮನ್ಯು ಸೇರಿ ಹಲವು ಆನೆಗಳ ತಂಡವನ್ನ ಸರ್ಗುಜಾಕ್ಕೆ ಕರೆದೊಯ್ಯಲಾಯ್ತು. ನೀರಿಕ್ಷೆಯಂತೆ ನಮ್ಮ ಆನೆಗಳು ಸರ್ಗುಜಾದಲ್ಲಿ ಸುಮಾರು 42 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಯಶಸ್ವಿಯಾದವು. ಈ ಆನೆ ಸೆರೆ ಕಾರ್ಯಾಚರಣೆ ಆಗ ʻThe Last Migration – Wild Elephant Captureʼ ಸಾಕ್ಷ್ಯಚಿತ್ರವಾಗಿ ರೂಪುಗೊಂಡಿತು. ಇದು ನಮ್ಮ ಅಭಿಮನ್ಯುವಿನ ಮೇಲಿನ ಅಭಿಮಾನ ಹೆಚ್ಚಿಸಿ ಈಗಲೂ ಅಪರೇಷನ್ ಎಂದರೆ ʻಅಭಿಮನ್ಯುʼ ಎನ್ನುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಹೀಗೆ ತನ್ನದೇ ಅಸಂಖ್ಯಾತ ಅಭಿಮಾನಿ ಬಳಗವನ್ನ ಕಟ್ಟಿಕೊಂಡ ಅಭಿಮನ್ಯು ಈ ಬಾರಿ ದಸರಾ ಆನೆಗಳ ಪಟ್ಟಿಯಿಂದ ಹೊರಗುಳಿದಿರುವುದು ಬೇಸರದ ಸಂಗತಿ.

ಅಂಬಾರಿ ಹೊತ್ತ ಆನೆಗಳು ಅಜರಾಮರ
ಮೈಸೂರು ದಸರಾ ಮಹೋತ್ಸವದಲ್ಲಿ ಈವರೆಗೆ ಹಲವು ಆನೆಗಳು ಭಾಗಿಯಾಗಿವೆ. ಇಂತಹ ಆನೆಗಳ ಪಟ್ಟಿ ನೂರಕ್ಕೂ ಅಧಿಕ. ಆದ್ರೆ ಅಂಬಾರಿ ಹೊತ್ತ ಆನೆಗಳ ಸಂಖ್ಯೆ ಕಡಿಮೆ. ಇದರಲ್ಲಿ ಶತಮಾನಗಳಷ್ಟು ಹಳೆಯಾದ ಜಯಮಾರ್ತಾಂಡ ಆನೆಯೇ ಅತ್ಯಂತ ಹಿರಿಯ. ಈತನೇ ಅಂಬಾರಿ ಹೊತ್ತ ಮೊದಲಿಗ. ಹಲವಾರು ವರ್ಷ ಮಾರ್ತಾಂಡ ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿಭಾಯಿಸಿ ಮಹಾರಾಜರ ಪ್ರೀತಿಗೂ ಪಾತ್ರನಾಗಿದ್ದ. ಈಗಲೂ ಅರಮನೆಯ ದೊಡ್ಡ ದ್ವಾರದ (ಜಯಮಾರ್ತಾಂಡ ದ್ವಾರ) ರೂಪದಲ್ಲಿ ಅಜರಾಮರನಾಗಿದ್ದಾನೆ. ಆನಂತರ ವಿಜಯಬಹದ್ದೂರ್, ರಾಮಪ್ರಸಾದ್, ನಂಜುಂಡ, ಐರಾವತ, ಮೋತಿಲಾಲ್, ರಾಜೇಂದ್ರ, ಬಿಳಿಗಿರಿ, ದ್ರೋಣ, ಬಲರಾಮ, ಅರ್ಜುನನ ನಂತರ ಅಭಿಮನ್ಯು ಈ ಸ್ಥಾನ ಅಲಂಕರಿಸಿದ್ದಾನೆ.
ಕೆಲ ಆನೆಗಳ ಅಕಾಲಿಕ ಮರಣ
ಇನ್ನೂ ದಸರೆಯಲ್ಲಿ ಪಾಲ್ಗೊಂಡು ವಿಶ್ವವಿಖ್ಯಾತಿಯಾಗಿದ್ದ ಆನೆಗಳ ಪೈಕಿ ಕೆಲ ಆನೆಗಳು ಅಕಾಲಿಕ ಮರಣಕ್ಕೆ ತುತ್ತಾಗಿ ಕಹಿ ಸುದ್ದಿ ನೀಡಿದ ಘಟನೆಗಳೂ ನಮ್ಮ ಕಣ್ಣಮುಂದಿವೆ. ಹೌದು. ಈ ಹಿಂದೆ ದ್ರೋಣ ಆನೆ ವಿದ್ಯುತ್ ದುರಂತದಿಂದ ಸಾವನ್ನಪ್ಪಿತ್ತು. 2023ರಲ್ಲಿ ಎಲ್ಲರ ಮನೆ ಮಾತಾಗಿದ್ದ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಾಸನದಲ್ಲಿ ಕಾಡಾನೆ ತಿವಿತದಿಂದ ಸಾವನ್ನಪ್ಪಿತ್ತು. ಕೋಟ್ಯಂತರ ಅಭಿಮಾನಿಗಳು ಅರ್ಜುನನ್ನ ನೆನೆದು ಕಣ್ಣೀರಿಟ್ಟಿದ್ದರು. ಇದೀಗ ಸರ್ಕಾರ ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ಘೋಷಣೆ ಮಾಡಿದೆ. ಇದಕ್ಕೂ 1 ವರ್ಷದ ಮುನ್ನವೇ ಅಂಬಾರಿ ಹೊರುವ ಆನೆಗಳ ಸಾಲಿನಲ್ಲಿದ್ದ ಗೋಪಾಲಸ್ವಾಮಿ ಆನೆಯೂ ಅಯ್ಯಪ್ಪ ಎಂಬ ಆನೆ ಜೊತೆಗೆ ಕಾದಾಟ ನಡೆಸಿ ಸಾವನ್ನಪ್ಪಿತ್ತು. ದಸರೆ, ಗಜಪಯಣ ಬಂತೆಂದರೆ, ಆನೆ ಪ್ರಿಯರಿಗೆ ಇದು ಮರೆಯಲಾಗದ ಕಹಿ ಘಟನೆ.

ಅಭಿಮನ್ಯು ನಂತರದ ಯಜಮಾನ ಯಾರು?
ದಸರಾ ಪ್ರತಿ ವರ್ಷದ ನಾಡ ಹಬ್ಬ. ಮೈಸೂರು ದಸರಾವೆಂದರೆ ಅದು ಜಂಬೂ ಸವಾರಿಯೂ ಹೌದು. ಅಭಿಮನ್ಯು ನಿವೃತ್ತಿ ನಂತರ ಹಳೆ ತಲೆಮಾರಿನ ಆನೆಗಳ ಕೊಂಡಿ ಮುಗಿದಿದೆ. ಬಳಿಕ ಹೊಸ ತಲೆಮಾರಿನ ಆನೆಗಳದ್ದೇ ಕಾಲ. ಈ ವರ್ಷದಿಂದ ಹೊಸ ಕ್ಯಾಪ್ಟನ್ ಬೇಕೇ ಬೇಕು. ಇದಕ್ಕಾಗಿ ಅರಣ್ಯ ಇಲಾಖೆ ತಯಾರಿ ಮಾಡಿಕೊಂಡಿದೆ. ದಶಕದ ಹಿಂದೆಯಷ್ಟೆ ಸೆರೆ ಸಿಕ್ಕು ನಾಲೈದು ವರ್ಷದಿಂದ ದಸರಾಕ್ಕೆ ಬರುತ್ತಿರುವ ಆನೆಗಳಿಗೂ ಅಂಬಾರಿ ಹೊರುವ ಅವಕಾಶ ಸಿಗಲಿದೆ. ಇದರಲ್ಲಿ ಧನಂಜಯ, ಮಹೇಂದ್ರ, ಪ್ರಶಾಂತ ಆನೆಗಳಿವೆ. ಇವುಗಳಲ್ಲಿ ಧನಂಜಯ ಇಲ್ಲವೇ ಪ್ರಶಾಂತ ಅಥವಾ ಮಹೇಂದ್ರಗೆ ಮುಂದಿನ ಅವಕಾಶ ಸಿಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಅರಣ್ಯಾಧಿಕಾರಿಗಳು.
ಅಂಬಾರಿ ಆನೆಗಳ ಸಿನಿಮಾ ನಂಟು
ಹಲವು ಆನೆಗಳು ಅಂಬಾರಿ ಹೊತ್ತು ಹೆಸರುವಾಸಿಯಾಗಿವೆ. ಅಲ್ಲದೇ ಸಿನಿಮಾ ನಂಟನ್ನು ಹೊಂದಿರುವುದು ವಿಶೇಷ. ಐರಾವತ ಆನೆಯಂತು ಹಾಲಿವುಡ್ ಸಿನಿಮಾದಲ್ಲೇ ನಟಿಸಿ ಸೈ ಎನಿಸಿಕೊಂಡಿದೆ. 1935ರಲ್ಲಿ ತೆರೆ ಕಂಡ ʻದಿ ಎಲಿಫೆಂಟ್ ಬಾಯ್ʼ ಅನ್ನೋ ಚಿತ್ರದಲ್ಲಿ ನಟಿಸಿದ್ದ ಐರಾವತ. ಇನ್ನೂ ಅಣ್ಣಾವ್ರ ಸೂಪರ್ ಹಿಟ್ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ರಾಜೇಂದ್ರ ಆನೆ. ಅಣ್ಣಾವ್ರ ʻಗಂಧದ ಗುಡಿʼ ಸಿನಿಮಾ ನೋಡುವಾಗೆಲ್ಲ ರಾಜೇಂದ್ರ ಕಣ್ಮುಂದೆ ಬರುತ್ತಾನೆ. ಇನ್ನೂ ಅಭಿಮನ್ಯು ಕೂಡ ವಿಶೇಷ ಸಾಕ್ಷ್ಯಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾನೆ. ದ್ರೋಣ ಆನೆಯೂ ʻಸ್ಟೋರ್ಡ್ ಆಫ್ ಟಿಪ್ಪು ಸುಲ್ತಾನ್ʼ ಧಾರಾವಾಹಿಯಲ್ಲಿ ಕಾಣಿಸಿಕೊಂಡಿತ್ತು.
ಹೀಗೆ ಮೈಸೂರು ದಸರಾದ ಮುಕುಟ ಮಣಿಗಳಂತೆ ಕಾಣಿಸಿಕೊಳ್ಳುವ ದಸರಾ ಆನೆಗಳ ಇತಿಹಾಸ ಅವಿಸ್ಮರಣೀಯವಾಗಿದೆ. ಆದ್ರೆ ಅಭಿಮನ್ಯು ನಂತರ ಯಾರಾಗಲಿದ್ದಾರೆ ಅಂಬಾರಿಯ ಸಾರಥಿ ಅನ್ನೋದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

