Friday, 22nd November 2019

Recent News

ಕರ್ನಾಟಕ ವಿರುದ್ಧ ಕೇರಳ ಪ್ರತಿಭಟನೆ – ಸ್ಥಳಕ್ಕೆ ಭೇಟಿ ನೀಡಿ ರಾಹುಲ್ ಬೆಂಬಲ

ತಿರುವನಂತಪುರಂ: ಕರ್ನಾಟಕದ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಬೇಕೆಂಬ ಕೇರಳದ ವಯನಾಡಿನ ಜನತೆಯ ಹೋರಾಟಕ್ಕೆ ಸಂಸದ ರಾಹುಲ್ ಗಾಂಧಿ ಆಗಮಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾತ್ರಿ ವೇಳೆ ಅರಣ್ಯದಲ್ಲಿ ವಾಹನ ಸಂಚಾರ ಮಾಡುವುದರಿಂದ ಅಪಘಾತ ಸಂಭವಿಸಿ ಹೆಚ್ಚಿನ ಕಾಡು ಪ್ರಾಣಿಗಳು ಸಾವನ್ನಪ್ಪುತ್ತವೆ ಎಂದು ಕರ್ನಾಟಕ ಸರ್ಕಾರ  ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಅರಣ್ಯದಲ್ಲಿ ವಾಹನ ಸಂಚಾರವನ್ನು ನಿಷೇಧ ಮಾಡಿತ್ತು. ಇದನ್ನು ತೆಗೆದು ಹಾಕುವಂತೆ ಕೇರಳ ಜನತೆ ಪ್ರತಿಭಟನೆ ಮಾಡುತ್ತಿದ್ದಾರೆ.

ಇಂದು ಈ ವಿಚಾರವಾಗಿ ಕೇರಳದ ಪ್ರತಿಭಟನೆ ನಡೆಯುತ್ತಿರುವ ಸುಲ್ತಾನ್ ಬತ್ತೇರಿ ಪಟ್ಟಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು, ನಿಷೇಧ ವಿರೋಧಿಸಿ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ), ಯೂತ್ ಕಾಂಗ್ರೆಸ್ ಮತ್ತು ಯೂತ್ ಲೀಗ್‍ನ ಕಾರ್ಯಕರ್ತರು ಕಳೆದ ಹತ್ತು ದಿನದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವವರನ್ನು ರಾಹುಲ್ ಗಾಂಧಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ರಾತ್ರಿ ಸಂಚಾರ ನಿಷೇಧ ಮಾಡಿದ್ದನ್ನು ವಿರೋಧಿಸಿ ಕೇರಳ ಯುವಕರು ಮಾಡುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಲು ನಾನು ವಯನಾಡಿಗೆ ಬಂದಿದ್ದೇನೆ. ಇದಕ್ಕೂ ಮುಂಚೆ ಉಪವಾಸದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರನ್ನು ನೋಡಿ ಆರೋಗ್ಯವನ್ನು ವಿಚಾರಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಬಂಡೀಪುರ ಅರಣ್ಯದಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು 9 ಗಂಟೆಗಳ ಕಾಲ ನಿಷೇಧ ಮಾಡಿದರೆ ಕೇರಳ ಮತ್ತು ಕರ್ನಾಟಕ ಜನರಿಗೆ ತೊಂದರೆ ಉಂಟಾಗುತ್ತದೆ. ಇದನ್ನು ವಿರೋಧಿಸಿ ಕೆಲ ಯುವಕರು ಸೆಪ್ಟಂಬರ್ 25 ರಿಂದ ಮಾಡುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ನಾನು ಬೆಂಬಲ ನೀಡುತ್ತೇನೆ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ರಾಹುಲ್ ಗಾಂಧಿ ನಿಷೇಧ ಸಂಬಂಧ ಚರ್ಚೆ ಮಾಡಿದ್ದರು. ರಾಹುಲ್ ಗಾಂಧಿ ಬೆಂಬಲದಿಂದ ವಯನಾಡು ಕ್ಷೇತ್ರದ ಸ್ಥಳೀಯರು ಪ್ರತಿಭಟನೆ ಮಾಡಿದ್ದು, ಇದರಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರು ಮತ್ತು ಸ್ಥಳೀಯರು ಭಾಗವಹಿಸಿದ್ದರು.

ಏನಿದು ಪ್ರಕರಣ?
ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ. ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ.

ಪರಿಸ್ಥಿತಿಯನ್ನು ಅಧ್ಯಯನ ನಡೆಸಲು ಸುಪ್ರೀಂ ಕೋರ್ಟ್ ಕೇಂದ್ರ ಸಾರಿಗೆ ಸಚಿವಾಲಯದ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳ ಜೊತೆ ಕರ್ನಾಟಕ, ತಮಿಳುನಾಡು, ಕೇರಳದ ಸಾರಿಗೆ ಸಚಿವಾಲಯದ ಅಧಿಕಾರಿಗಳನ್ನು ಹೊಂದಿದ್ದ ಸಮಿತಿಯನ್ನು ರಚಿಸುವಂತೆ ಸೂಚಿಸಿತ್ತು. ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಹಿಂದಿದ್ದ ನಾಲ್ಕೂ ಸರ್ಕಾರಗಳು ಸಮ್ಮತಿ ಸೂಚಿಸಿರಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಿರಲಿಲ್ಲ. ಸಿಎಂ ಕುಮಾರಸ್ವಾಮಿ ಸರ್ಕಾರದ ಜೊತೆಗೂ ಕೇರಳ ಮಾತುಕತೆ ನಡೆಸಿತ್ತು.

ಬಲಿಯಾದ ಪ್ರಾಣಿಗಳ ಸಂಖ್ಯೆ ಎಷ್ಟು?
ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿವೆ. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿವೆ. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಇದೀಗ ಮತ್ತೆ ಸಂಚಾರ ಮುಕ್ತ ಮಾಡಿದ್ರೆ ಮತ್ತೆ ಪ್ರಾಣಿಗಳು ಬಲಿಯಾಗುತ್ತವೆ ಅಂತ ಪ್ರಾಣಿಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

ಯಾವ ವರ್ಷದಲ್ಲಿ ಎಷ್ಟು ಪ್ರಾಣಿಗಳು ಪ್ರಾಣ ಕಳೆದುಕೋಂಡಿವೆ ಎಂಬ ವಿವರ ಈ ಕೆಳಗಿನಂತಿದೆ:
2004-32, 200 -7, 2007-41, 2008-2, 2009-2, 2010-3, 2011-7, 2012-10, 2013-6, 2014-1, 2015-2, 2016-1, 2017-2, 2018- 2 ಪ್ರಾಣಿಗಳು ಮೃತಪಟ್ಟಿವೆ.

Leave a Reply

Your email address will not be published. Required fields are marked *