ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

Public TV
1 Min Read
Rahul Gandhi 8

ನವದೆಹಲಿ: ಮೋದಿ ಉಪನಾಮ ವಿವಾದ (Modi Surname Remark) ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ (Supreme Court) ನೀಡಿದ ತೀರ್ಪನ್ನು ಸ್ವಾಗತಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಟ್ವೀಟ್‌ ಮಾಡಿದ್ದಾರೆ.

ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ. ಭಾರತದ ಕಲ್ಪನೆಯನ್ನು ರಕ್ಷಿಸಿ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌, ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು. ಸತ್ಯಮೇವ ಜಯತೆ.. ಜೈ ಹಿಂದ್‌ ಎಂದು ಟ್ವೀಟ್‌ ಮಾಡಿತ್ತು.

‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿ ತೀರ್ಪು ಪ್ರಕಟಿಸಿತು.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಹುಲ್‌ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ರಾಹುಲ್‌ ಅವರು 2019ರ ಏಪ್ರಿಲ್‌ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್‌ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

Web Stories

Share This Article