ರಾಯಚೂರು: ರಾಜೀನಾಮೆ ನೀಡಿದ ಶಾಸಕರಿಗೆ ಜನರು ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟ್ ಹಾಕುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಗೆ ವಿರೋಧಿಸಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ರೀತಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಅಲ್ಲದೆ ಈಗ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತೀರಿ. ನಿಮ್ಮ ಬೆಲೆ ಎಷ್ಟು. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ.
ಅಲ್ಲದೆ ರಾಜೀನಾಮೆ ನೀಡಿರುವ ಶಾಸಕರನ್ನು ಮರು ಚುನಾವಣೆ ನಡೆಸಿ ಸೋಲಿಸಿ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಸಹ ಬಿಜೆಪಿ ಸೇರಲಿದ್ದಾರೆ. ಆರು ತಿಂಗಳಲ್ಲಿ ಬಾದರ್ಲಿ ಬಿಜೆಪಿ ಪಕ್ಷದಲ್ಲಿರುತ್ತಾರೆ ಎನ್ನುವ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಚಾಮರಾಜನಗರದಲ್ಲಿ ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದರು. ಅಲ್ಲದೆ ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅಲ್ಲದೆ ವಿಶ್ವನಾಥ್ ವಿರುದ್ಧ ಅವಹೇಳನಕಾರಿ ಬರಹ ಬರೆದಿದ್ದರು. ಈ ಮೂಲಕ ವಿಶ್ವನಾಥ್ ಅವರು ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ.
ಕೇಂದ್ರ ಬಜೆಟ್ ಮರುದಿನವೇ ಜೆಡಿಎಸ್‍ನ ಮೂವರು ಹಾಗೂ ಕಾಂಗ್ರೆಸ್ ನ 10 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯ ಪತ್ರದೊಂದಿಗೆ ಸ್ಪೀಕರ್ ಗೆ ಕಚೇರಿಗೆ ತೆರಳಿದಾಗ ಅಲ್ಲಿ ಸ್ಪೀಕರ್ ಇರಲಿಲ್ಲ. ಹೀಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಬಳಿಕ ಅತೃಪ್ತ ಶಾಸಕರೆಲ್ಲರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಕೂಡ ಉಪಸ್ಥಿತರಿದ್ದರು.