– ವಾಹನ ಸಮೇತ ಮರಳು ಜಪ್ತಿ
ಕೊಪ್ಪಳ: ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ಮಾಡಿದ್ದು, ಬರೋಬ್ಬರಿ 19 ಬೈಕ್‍ಗಳನ್ನು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ನಗರದ ಹೊರವಯಲಯದ ಬೆಟ್ಟದ ಪ್ರದೇಶದಲ್ಲಿ ನಡೆದಿದೆ.
ಇನ್ಸ್‌ಪೆಕ್ಟರ್ ಉದಯರವಿ ಅವರ ನೇತೃತ್ವದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಂಗಾವತಿಯ ಹೊರವಲಯದಲ್ಲಿ ಈ ಜೂಜಾಟ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಪೊಲೀಸರು ದಾಳಿ ಮಾಡುತ್ತಿದ್ದಂತಯೇ ಬಹುತೇಕ ಜೂಜುಕೋರರು ಓಡಿ ಹೋಗಿದ್ದು, ಮೂವರು ಮಾತ್ರ ಸಿಕ್ಕಿ ಬಿದ್ದಿದ್ದಾರೆ. ಸ್ಥಳದಲ್ಲಿ ಪತ್ತೆಯಾದ 19 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳು ಸಾಗಾಣಿಕೆ:
ಗಂಗಾವತಿ ತಾಲೂಕಿನ ಹಿರೇಜಂತಕ್ಕಲ್ ಪ್ರದೇಶದ ವಿನೋಬನಗರದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಎರಡು ಟ್ಯಾಕ್ಟರನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ಮಾಡಿದ ಸಂದರ್ಭದಲ್ಲಿ ಟ್ರಾಕ್ಟರ್ ಚಾಲಕರು ವಾಹನಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಮರಳು ಸಮೇತ ಟ್ರಾಕ್ಟರ್ ಗಳನ್ನು ಠಾಣೆಗೆ ತಂದ ಪೊಲೀಸರು, ದೂರು ದಾಖಲಿಸಿದ್ದಾರೆ. ಈ ಪೈಕಿ ಒಂದು ವಾಹನಕ್ಕೆ ಟ್ರಾಲಿಯ ನಂಬರ್ ಇಲ್ಲದೇ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.