ಬೆಂಗಳೂರು: ಇಂದು ಸಂಜೆ ವೇಳೆಗೆ ಆರಂಭವಾಗಿರುವ ಮಳೆ ಇನ್ನು ಮೂರು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರದಲ್ಲಿ ಇಂದು ರಾತ್ರಿ ಕೂಡ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಗುಡುಗು, ಗಾಳಿ ಸಹಿತ ಮಳೆಯಾಗುತ್ತದೆ ಎಂಬ ಮಾಹಿತಿ ಲಭಿಸಿದೆ. ರಾಜ್ಯದ ಕೋಲಾರ, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಯ ಹಲವು ಪ್ರದೇಶದಲ್ಲಿ ಸಂಜೆ ವೇಳೆಗೆ ಮಳೆಯಾಗಿದ್ದು, ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.
Advertisement
Advertisement
ಬೆಂಗಳೂರು ನಗರದ ಬಾಣಸವಾಡಿ, ಶಾಂತಿನಗರ, ಮಲ್ಲೇಶ್ವರಂ, ಕಾರ್ಪೊರೇಷನ್, ಮೆಜಸ್ಟಿಕ್, ಆನೇಕಲ್, ಯಶವಂತಪುರ, ಹೆಬ್ಬಾಳ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು, ಏಕಾಏಕಿ ಮಳೆ ಆರಂಭವಾದ ಪರಿಣಾಮ ವಾಹನ ಸವಾರರು ಪರದಾಟ ನಡೆಸಿದರು. ಇತ್ತ ಸಂಜೆ ವೇಳೆಗೆ ಕೋಲಾರ ಜಿಲ್ಲೆಯ ಕೆಲವೆಡೆ ಮಳೆರಾಯನ ಆರ್ಭಟ ಜೋರಾಗಿತ್ತು. ಉತ್ತಮ ಭರಣಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಸುಮಾರು 30 ನಿಮಿಷಗಳ ಕಾಲ ಗುಡುಗು ಸಹಿತ ಸುರಿದ ಮಳೆಗೆ ಜಿಲ್ಲೆಯ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.