ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಿಂದ ಯಾವ ಕ್ಷಣದಲ್ಲಾದರೂ ನೀರು ಹೊರಗೆ ಬಿಡುವ ಸಾಧ್ಯತೆಯಿದ್ದು ನದಿ ಪಾತ್ರದ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಇಂದು ಸಂಜೆಯ ವೇಳೆಗೆ 1 ಲಕ್ಷ ಕ್ಯೂಸೆಕ್ ಅಧಿಕ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಬರುತ್ತಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ನೀರನ್ನು ಬಿಡುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕೆಆರ್‌ಎಸ್ ಕಾರ್ಯಪಾಲಕ ಎಂಜಿನಿಯರ್ ಸೂಚನೆ ನೀಡಿದ್ದಾರೆ.
Advertisement
ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಇಂದು 100 ಅಡಿ ದಾಟಿದೆ. ಒಂದೂವರೆ ದಿನದಲ್ಲಿ 10 ಅಡಿ ಏರಿಕೆಯಾಗಿದೆ.
Advertisement
Advertisement
124.80 ಅಡಿ ಗರಿಷ್ಠ ಎತ್ತರದ ಡ್ಯಾಂನಲ್ಲಿ ಪ್ರಸ್ತುತ 102.30 ಅಡಿ ನೀರು ಸಂಗ್ರಹಗೊಂಡಿದೆ. ಗುರುವಾರ ಬೆಳಗ್ಗೆ ಜಲಾಶಯದಲ್ಲಿ 91 ಅಡಿ ನೀರು ಸಂಗ್ರಹಗೊಂಡಿತ್ತು. ಕೊಡಗಿನಲ್ಲಿ ನಿರಂತರ ಮಳೆ ಜೊತೆಗೆ ಹೇಮಾವತಿ ಜಲಾಶಯದಿಂದ ನೀರನ್ನು ಹೊರಬಿಟ್ಟ ಪರಿಣಾಮ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
Advertisement
ಇಂದು ಮಧ್ಯಾಹ್ನ 12 ಗಂಟೆಯಲ್ಲಿ 60 ಸಾವಿರ ಕ್ಯೂಸೆಕ್ ಒಳ ಹರಿವು ಇದ್ದರೆ ಮಧ್ಯಾಹ್ನ 2 ಗಂಟೆ ವೇಳೆಗೆ 63,211 ಕ್ಯೂಸೆಕ್‍ಗೆ ಏರಿಕೆಯಾಗಿತ್ತು. ಇಂದು ಸಂಜೆಯ ವೇಳೆಗೆ 1 ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗಿದೆ. ಸದ್ಯ 469 ಕ್ಯೂಸೆಕ್ ನೀರನ್ನು ಮಾತ್ರ ಜಲಾಶಯದಿಂದ ಹೊರಬಿಡಲಾಗುತ್ತಿದೆ.
ಪಶ್ಚಿಮ ಘಟ್ಟ, ಮಲೆನಾಡು, ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಹೇಮಾವತಿ ಜಲಾಶಯದಿಂದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾರಂಗಿಯಿಂದ 30 ಸಾವಿರಕ್ಕೂ ಹೆಚ್ಚು, ಹೇಮಾವತಿಯಿಂದ 5 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪರಿಣಾಮ ಕೆಆರ್‌ಎಸ್ ನೀರಿನ ಮಟ್ಟ 100 ಅಡಿ ದಾಟಿದೆ.
ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.