ರಾಮನಗರ: ಸವಾರನ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಶ್ಯಾನ ಭೋಗನಹಳ್ಳಿ ಸಮೀಪ ಜರುಗಿದೆ.
ರಾಮನಗರದಿಂದ ಶ್ಯಾನಭೋಗನಹಳ್ಳಿಗೆ ಬೈಕಿನಲ್ಲಿ ಸ್ನೇಹಿತರಾದ ಅರ್ಜುನ್ (21), ಶರಣ್ (21) º ಕೇಶವ್ (21) ವೇಗವಾಗಿ ತೆರಳುತ್ತಿದ್ದರು. ರಸ್ತೆಯ ತಿರುವಿನ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಮನೆಯೊಂದರ ಬಳಿ ಹಾಕಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಅರ್ಜುನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಗಾಯಾಳುಗಳಲ್ಲಿ ಒಬ್ಬನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದ್ದು, ಮತ್ತೋರ್ವನನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರಾಮನಗರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.