ಬೆಳಗಾವಿ: ಗೋಕಾಕ್ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಉಪಚುನಾವಣೆಗೆ ತಯಾರಿ ನಡೆಸಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಗೋಕಾಕ್ ಪಟ್ಟಣದ ರಮೇಶ್ ಜಾರಕಹೊಳಿಯವರ ನಿವಾಸದ ಮುಂಭಾಗದಲ್ಲಿಯೇ ಬೃಹತ್ ವೇದಿಕೆಯನ್ನು ಹಾಕಲಾಗಿದೆ. ರಮೇಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಂಕಲ್ಪ ಸಮಾವೇಶ ಆಯೋಜಿಸಲಾಗಿದೆ. ರಮೇಶ್ ಜಾರಕಿಹೊಳಿ ಸಂಕಲ್ಪ ಸಮಾವೇಶಕ್ಕೆ ಚಾಲನೆ ನೀಡಿದ್ದು, ಮತ್ತೋರ್ವ ಅನರ್ಹ ಶಾಸಕ ಮಹೇಶ್ ಕುಮಟ್ಟಳ್ಳಿ, ಗೋಕಾಕ್ ಕ್ಷೇತ್ರದ ಪ್ರಮುಖ ಮುಖಂಡರು ಸೇರಿದಂತೆ ಸಾವಿರಾರು ಬೆಂಬಲಿಗರು ಭಾಗಿಯಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದರು. ಇತ್ತ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳುವ ಮೂಲಕ ಪರೋಕ್ಷವಾಗಿ ಉಪಚುನಾವಣೆಯ ರಣಕಹಳೆಯನ್ನು ಮೊಳಗಿಸಿದ್ದರು. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಂಕಲ್ಪ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.