ಬೆಳಗಾವಿ: ಹೊಸ ಬಜೆಟ್ ಬೇಡ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಜೆಟ್ ಮಂಡನೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹಕ್ಕು. ಆದರೆ ಬಜೆಟ್ ಮಂಡನೆ ವಿಚಾರದಲ್ಲಿ ನಮ್ಮ ನಾಯಕರಾದ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ಕಾಂಗ್ರೆಸ್ ಸರ್ಕಾರದ ಹಳೇ ಯೋಜನೆಗಳನ್ನೇ ಮುಂದುವರಿಸಬೇಕು ಎನ್ನುವ ನಿರ್ಧಾರನ್ನು ಸಿಎಂ ಕುಮಾರಸ್ವಾಮಿ ಅವರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ವಿಷಯದ ಕುರಿತು ಮಾತನಾಡಿದ ಸಚಿವರು, ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವರಾದ ದಿನೇಶ್ ಗುಡೂರಾವ್, ಸತೀಶ್ ಜಾರಕಿಹೊಳಿ ಹಾಗೂ ಎಚ್.ಕೆ.ಪಾಟೀಲ್ ಅವರು ಪೈಪೋಟಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಪಕ್ಷದ ಹಿರಿಯ ನಾಯಕರ ಗಮನಕ್ಕೆ ತಂದಿದ್ದೇವೆ. ಅಲ್ಲದೇ ಉತ್ತರ ಕರ್ನಾಟಕಕ್ಕೆ ಇನ್ನೂ ಮೂರು ಸಚಿವ ಸ್ಥಾನ ನೀಡುವ ಸಾಧ್ಯತೆ ಇದ್ದು, ಬೆಳಗಾವಿ ಹಾಗೂ ಗದಗ ಜಿಲ್ಲೆಯ ಶಾಸಕರಿಗೆ ಅವಕಾಶ ಸಿಗಲಿದೆ ಎಂದು ಹೇಳಿದರು.
ಕಾಂಗ್ರೆಸ್ಸಿನ ಮೂವರಿಂದ ಬೆಂಬಲ:
ಬಜೆಟ್ ವಿಚಾರವಾಗಿ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್, ಸಚಿವ ರಮೇಶ್ ಜಾರಕಿಹೊಳಿ ಬೆನ್ನಲ್ಲೆ ಸದ್ಯ ಸಂಸದ ವೀರಪ್ಪ ಮೋಯ್ಲಿ ಕೂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
https://youtu.be/RBIURxo0YIg