ಮಂಗಳೂರು: ದಕ್ಷಿಣ ಕನ್ನಡ (Dakshina kannada) ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಜುಲೈ 2ರಂದು ಜಿಲ್ಲೆಗೆ ರೆಡ್ ಅಲರ್ಟ್(Red Alert) ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಅದರಂತೆ ಜುಲೈ 2ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಇರಲಿದೆ.
ಅಂಗನವಾಡಿ ಕೇಂದ್ರಗಳಿಂದ ದ್ವಿತೀಯ ಪಿಯುಸಿ (2nd PUC)ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯವಾಗಲಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಉಡುಪಿ | ಕಾರಿಗೆ ಡೀಸೆಲ್ ತುಂಬಿಸಿ ಹಣ ಕೊಡದೆ ಪರಾರಿ
ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿಗಳು, ತಗ್ಗು ಪ್ರದೇಶಗಳು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ. ಅಗತ್ಯವಿಲ್ಲದಿದ್ದರೆ ಮನೆಯಿಂದ ಹೊರಬರದಂತೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚನೆ ನೀಡಲಾಗಿದೆ.ಇದನ್ನೂ ಓದಿ: ಕೆಸರು ಗದ್ದೆಯಾದ ಬೆಳಗಾವಿ-ಗೋವಾ ಹೆದ್ದಾರಿ: ನಡುರಸ್ತೆಯಲ್ಲೇ ಸಿಲುಕಿದ ಬಸ್, ಪ್ರಯಾಣಿಕರ ಪರದಾಟ!
ಉಡುಪಿ ಜಿಲ್ಲೆಯಲ್ಲೂ ಕೂಡ ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಅನಗತ್ಯವಾಗಿ ಹೊರಗೆ ತೆರಳದಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
