ಬೆಂಗಳೂರು ಗ್ರಾಮಾಂತರ: ಆಗಸ್ಟ್ 14 ರಂದು ಯುವನಿಧಿ ಯೋಜನೆಯಡಿ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ‘ಯುವನಿಧಿ’ ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ನೋಂದಣಿಯು ಚಾಲ್ತಿಯಲ್ಲಿದ್ದು, 2025ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾದಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಯೋಜನೆಯ ಪ್ರಯೋಜನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮಾದಗೊಂಡನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ‘ಯುವನಿಧಿ ಯೋಜನೆಯ ಅಭ್ಯರ್ಥಿಗಳ ನೋಂದಣಿ ಕಾರ್ಯಕ್ರಮ’ವನ್ನು ಆಯೋಜಿಸಲಾಗಿದೆ. ಆ.14ರ ಬೆಳಗ್ಗೆ 10 ರಿಂದ ಸಾಯಂಕಾಲ 4 ಗಂಟೆ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದಗೊಂಡನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಯೋಜನೆಯಡಿ 2023 ಹಾಗೂ 2024ರಲ್ಲಿ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವವರು ಕೂಡ ಅರ್ಜಿ ಸಲ್ಲಿಸಬಹುದು. ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೂಚಿತ ವಿದ್ಯಾರ್ಹತೆಗಳಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1.500 ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲಾಗುತ್ತದೆ. ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.
ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.