ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಸಿರುವುದರಿಂದ ಐದು ಗ್ರಾಮಗಳು ಜಲಾವೃತವಾಗಿದ್ದು, ಸಂಚಾರ, ವಿದ್ಯುತ್ ಸಂಪರ್ಕ ಕಡಿತವಾಗಿದೆ.
ನದಿಗೆ ನೀರು ಬಿಡುಗಡೆ ಮಾಡಿರುವುದರಿಂದ ಒಂದಡೆ ರೈತರಿಗೆ ಸಂತಸ ತಂದಿದ್ದರು, ಮತ್ತೊಂದೆಡೆ ಪ್ರವಾಹ ಭೀತಿ ಎದುರಾಗಿದೆ. ಜಲಾಶಯದಿಂದ 1 ಲಕ್ಷ ಸಾವಿರ ಕ್ಯೂಸೆಕ್ಸ್ ನೀರು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆ ರಾಯಚೂರು ಜಿಲ್ಲೆಯ ನಡುಗಡ್ಡೆ ಗ್ರಾಮಗಳು ಜಲಾವೃತವಾಗಿವೆ. ಪ್ರಮುಖವಾಗಿ ಲಿಂಗಸುಗೂರಿನ ಮ್ಯಾದರಗಡ್ಡಿ, ಕಡದರ ಗಡ್ಡಿ ಸೇರಿದಂತೆ ಮೂರು ಗಡ್ಡೆಗಳ ಸುತ್ತಲೂ ನೀರು ಆವರಿಸಿಕೊಂಡಿದೆ. ಇದರಿಂದ ಈ ಭಾಗಕ್ಕೆ ಸಂಚಾರ, ವಿದ್ಯುತ್ ವ್ಯತ್ಯಯ ಉಂಟಾಗಿದೆ.
ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಿರುವ ಕಾರಣ ನದಿ ತಟದ ಬಳಿ ಯಾರೂ ಹೋಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೇ ನೀರಿನಲ್ಲಿ ಈಜುವುದು, ತೆಪ್ಪ ಬಳಸುವುದನ್ನೂ ನಿಷೇಧಿಸಲಾಗಿದೆ. ಶೀಲಹಳ್ಳಿ ಸೇತುವೆ ಈಗಾಗಲೇ ಮುಳುಗಿದ್ದು ಐದಾರು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಇನ್ನೂ ರಾಯಚೂರು ತಾಲೂಕಿನ ಕುರ್ವಕುಲಾ, ಕುರ್ವಾಕುರ್ದಾ ಗ್ರಾಮಗಳು ಜಲಾವೃತವಾಗಿ ಸಂಪರ್ಕ ಕಡಿತಗೊಂಡಿದೆ. ಹೆಚ್ಚಿನ ಪ್ರಮಾಣ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಅಳವಡಿಸಿದ್ದ ಪಂಪ್ ಸೆಟ್ ಗಳು ನೀರಿನಲ್ಲಿ ಮುಳುಗಿಹೋಗಿವೆ.
ಗ್ರಾಮಗಳಲ್ಲಿ ಜಾನುವಾರುಗಳನ್ನ ಕಟ್ಟಿಕೊಂಡುರುವ ಕುಟುಂಬಗಳು ಅಲ್ಲಿಯೇ ಉಳಿದುಕೊಂಡಿವೆ. ಅಗತ್ಯವಿದ್ದಲ್ಲಿ ಗಂಜಿ ಕೇಂದ್ರ ತೆರೆಯಲು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನದಿ ದಡಕ್ಕೆ ಯಾರು ತೆರಳದಂತೆ ಭದ್ರತೆಯನ್ನು ಏರ್ಪಡಿಸಲಾಗಿದೆ.