ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಈ ಫೋನ್ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ.
ಹೌದು. ಜಿಯೋ 500 ರೂ. ಬೆಲೆಯ ಫೀಚರ್ ಫೋನ್ ತಯಾರಿಸಿದೆ ಎಂದು ಮಾಧ್ಯಮವೊಂದು ಸುದ್ದಿಯನ್ನು ಪ್ರಕಟಿಸಿದೆ. ಜುಲೈ 21ರಂದು ರಿಲಯನ್ಸ್ ಇಂಡಸ್ಟ್ರೀನ್ ವಾರ್ಷಿಕ ಸಭೆಯ ವೇಳೆ ಈ ಫೋನ್ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Advertisement
ಜಿಯೋ ಫೀಚರ್ ಫೋನಿನ ಬೆಲೆ ಅಂದಾಜು 500 ರೂ. ಇರಲಿದೆ. 2ಜಿ ಫೋನ್ ಹೊಂದಿರುವ ಗ್ರಾಹಕರು ನೇರವಾಗಿ 4ಜಿ ಫೋನ್ ಗಳನ್ನು ಸುಲಭವಾಗಿ ಪಡೆಯಲು ಕಡಿಮೆ ಬೆಲೆಯಲ್ಲಿ ಈ ಫೋನ್ ಬಿಡುಗಡೆ ಮಾಡಲು ಜಿಯೋ ಮುಂದಾಗಿದೆ ಎಂದು ಟೆಲಿಕಾಂ ವಲಯದ ವಿಶ್ಲೇಷಕರೊಬ್ಬರು ತಿಳಿಸಿದ್ದಾರೆ.
Advertisement
ಈ ವಿಚಾರದ ಬಗ್ಗೆ ಮಾಧ್ಯಮಗಳು ಜಿಯೋ ಕಂಪೆನಿಯನ್ನು ಸಂಪರ್ಕಿಸಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
Advertisement
ಕಡಿಮೆ ಬೆಲೆಯಲ್ಲಿ ಯಾಕೆ?
ಜಿಯೋ ಈಗ ಹೊಸ ಗ್ರಾಹಕರನ್ನು ಸೆಳೆಯುಲು ಮಂದಾಗುತ್ತಿದೆ. ಸೆಪ್ಟೆಂಬರ್ ನಲ್ಲಿ ಆರಂಭವಾದ ಬಳಿಕ ನಂತರದ ತಿಂಗಳಿನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ಗ್ರಾಹಕರು ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಯೋ ಈಗ 2ಜಿ ಸೇವೆಯನ್ನು ಬಳಸುತ್ತಿರುವ ಗ್ರಾಹಕರ ಆಕರ್ಷಿಸಲು ಫೀಚರ್ ಫೋನ್ ತಯಾರಿಸಿದೆ. ಅಷ್ಟೇ ಅಲ್ಲದೇ ಪ್ರಸ್ತುತ ಮಾರುಕಟ್ಟೆಯಲ್ಲಿ 4ಜಿ ಎಲ್‍ಟಿಇ ಬೆಂಬಲಿಸುವ ಫೋನ್ ಗಳಿದ್ದರೂ ಇವುಗಳ ಬೆಲೆ ಜಾಸ್ತಿ ಇರುವ ಕಾರಣ ಜಿಯೋ ಈಗ ಫೋನ್ ತಯಾರಿಸಿ ಬಿಡುಗಡೆ ಮಾಡಲು ಮುಂದಾಗಿದೆ.
Advertisement
ಜಿಯೋ 999 ರೂ.ನಿಂದ ಆರಂಭವಾಗಿ 1500 ರೂ ಒಳಗಡೆ ಕೀ ಪ್ಯಾಡ್ ಹೊಂದಿರುವ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ ಫೀಚರ್ ಫೋನ್‍ಗಳನ್ನು ಬಿಡುಗಡೆ ಮಾಡಲಿದೆ ಎನ್ನುವ ವರದಿ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಪ್ರಸ್ತುತ ಜಿಯೋ ಎಲ್‍ವೈಎಫ್ ಹೆಸರಿನಲ್ಲಿ ಆಂಡ್ರಯ್ಡ್ ಫೋನ್‍ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ.
ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್ ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2 ಸಾವಿರ ರೂ.) ಬೆಲೆಯ ಆಂಡ್ರಾಯ್ಡ್ ಫೋನ್ ಅಗತ್ಯವಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಜಿಯೋ ಕಂಪೆನಿ ಮತ್ತು ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲಿದೆ ಎಂದು ಟೆಕ್ ಮೂಲಗಳ ಮಾಹಿತಿಯನ್ನು ಆಧರಿಸಿ ಈ ಹಿಂದೆ ಮಾಧ್ಯಮವೊಂದು ವರದಿ ಮಾಡಿತ್ತು.
ಏನಿದು ವಾಯ್ಸ್ ಓವರ್ ಎಲ್‍ಟಿಇ?
ಇಲ್ಲಿಯವರೆಗೆ ಟೆಲಿಕಾಂ ಕಂಪೆನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ವೇಗದ ಇಂಟರ್‍ನೆಟ್ ಇದ್ದರೆ ಮಾತ್ರ ಈ ಸೇವೆಯನ್ನು ಗ್ರಾಹಕರು ಯಶಸ್ವಿಯಾಗಿ ಬಳಸಿಕೊಳ್ಳಬಹುದು. ಹಲವು ಫೋನ್ ಗಳು ಎಲ್‍ಟಿಇ ಬೆಂಬಲಿಸದ ಕಾರಣ ಜಿಯೋ ಸಿಮ್ ಹಾಕಲು ಸಾಧ್ಯವಾಗುತ್ತಿರಲಿಲ್ಲ. ಏರ್‍ಟೆಲ್ ಮತ್ತು ವೊಡಾಫೋನ್‍ಗಳು ಪ್ರಯೋಗಿಕ ಪರೀಕ್ಷೆ ನಡೆಸುತ್ತಿದ್ದು ಕೆಲ ತಿಂಗಳಿನಲ್ಲಿ ಈ ವೋಲ್ಟ್ ಸೇವೆ ಗ್ರಾಹಕರಿಗೆ ಲಭ್ಯವಾಗಲಿದೆ. ಜಿಯೋ ಸೇವೆ ಆರಂಭವಾದ ಬಳಿಕ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಬಹುತೇಕ ಕಂಪೆನಿಗಳ ಫೋನ್ ಗಳು ಎಲ್‍ಟಿಇ ಟೆಕ್ನಾಲಜಿಯನ್ನು ಬೆಂಬಲಿಸುತ್ತಿದೆ.
ಇದನ್ನೂ ಓದಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?