ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಅತ್ಯಗತ್ಯವೆನಿಸಿದನ್ನು ಬಿಟ್ಟು, ಉಳಿದ ಎಲ್ಲಾ ಬ್ಯಾರಿಕೇಡ್‌ಗಳನ್ನು(Barricades) ತಕ್ಷಣವೇ ತೆರವುಗೊಳಿಸಬೇಕು ಎಂದು ಭಾನುವಾರ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ.
ಭಾನುವಾರ ರಜಾದಿನವಾಗಿದ್ದರೂ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳನ್ನು(Metro Station) ಬಂದ್ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಶೇಷ ವಿಚಾರಣೆ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ರಜಾದಿನದ ಪೀಠದಲ್ಲಿ ನಡೆಯಿತು.
ವಿಚಾರಣೆ ನಡೆಸಿದ ಕೋರ್ಟ್ ಸಾರ್ವಜನಿಕ ಸಭೆ-ಸಮಾರಂಭಗಳನ್ನು ನಿರ್ಬಂಧಿಸುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023 ರ ಸೆಕ್ಷನ್ 163 ರ ಅನ್ವಯ ಹೊರಡಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆಯುವಂತೆ ಪೊಲೀಸರಿಗೆ ಸೂಚಿಸಿತು.
ಸುಪ್ರೀಂ ಕೋರ್ಟ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 163 ರ ನೋಟಿಸ್ ಅಳವಡಿಸಿರುವುದು ನಮಗೆ ತಿಳಿದುಬಂದಿದೆ. ಸುಪ್ರೀಂ ಕೋರ್ಟ್ ಅಥವಾ ಯಾವುದೇ ಇತರ ನ್ಯಾಯಾಲಯಗಳಿಗೆ ಪ್ರವೇಶಿಸಲು ಮತ್ತು ಹೊರಬರಲು ಸಾರ್ವಜನಿಕರಿಗೆ ಯಾವುದೇ ಆತಂಕ ಅಥವಾ ಅಡ್ಡಿ ಉಂಟಾಗದಂತೆ ಆ ನಿರ್ಬಂಧ ಫಲಕಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಆದೇಶಿಸಿತು. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮೇಲಿನ ನಂಬಿಕೆ ಕಳೆದುಕೊಂಡಿದ್ದೇನೆ: ಕಪಿಲ್ ಸಿಬಲ್
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸಾರ್ವಜನಿಕರ ಮತ್ತು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ಮೆಟ್ರೋ ಮತ್ತು ರೈಲು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು. ಯಾವುದೇ ಕಾನೂನುಬಾಹಿರ ಕಾರಣಗಳಿಲ್ಲದೆ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಬಾರದು ಮತ್ತು ಶಾಂತಿಯುತ ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧಿಸಬಾರದು ಎಂದು ಸೂಚಿಸಿತು.
ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ತ್ರಿಸದಸ್ಯ ಪೀಠವು ಪ್ರತಿಭಟನೆಯ ಕಾರಣದಿಂದ ಮೆಟ್ರೋ ಮತ್ತು ರೈಲುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬಾರದು ಎಂದು ಕೇಂದ್ರಕ್ಕೆ ಸೂಚಿಸಿತ್ತು. ಆದಾಗ್ಯೂ ಶನಿವಾರ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಇದನ್ನು ನ್ಯಾಯಾಂಗ ನಿಂದನೆ ಎಂದು ಅರ್ಜಿದಾರರ ಪರ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ವಾದಿಸಿದರು. ಇದನ್ನೂ ಓದಿ: ಷರತ್ತು ವಿಧಿಸಿ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಸೌರವ್ ದಾಸ್ ಬಿಡುಗಡೆ
ಈ ವೇಳೆ ಪ್ರತಿಕ್ರಿಯಿಸಿದ ಪೀಠ, “ನಿಮಗೆ ಪ್ರತಿಭಟಿಸುವ ಹಕ್ಕಿದೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ನಿಮ್ಮ ಪ್ರತಿಭಟನೆಯ ಪ್ರಕ್ರಿಯೆಯು ‘ಪೊಲೀಸ್ ಕಾಯ್ದೆ’ಯ (Police Act) ವ್ಯಾಪ್ತಿಗೆ ಒಳಪಟ್ಟಿರಬೇಕು,” ಎಂದು ಸ್ಪಷ್ಟಪಡಿಸಿತು.
ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಸಂದರ್ಭ ಮತ್ತು ಅದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ದೆಹಲಿ ಪೊಲೀಸ್, ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮಂಗಳವಾರದೊಳಗೆ ಈ ಕುರಿತು ಅನುಪಾಲನಾ ವರದಿ (Compliance Report) ಸಲ್ಲಿಸುವಂತೆ ಆದೇಶಿಸಿ, ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

