ನವದೆಹಲಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಏ.22ಕ್ಕೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು (Bengaluru Police) ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ಹೆಚ್ಚುವರಿ ಚಾರ್ಜ್ಶೀಟ್ ಸೇರಿದಂತೆ ತಾಂತ್ರಿಕ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಿತ್ತು. ಬಳಿಕ ನ್ಯಾ. ಜೆ.ಬಿ ಪಾರ್ದಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಲು ನಿರ್ಧರಿಸಿತ್ತು.ಇದನ್ನೂ ಓದಿ:ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ದರ್ಶನ್ ತಾಯಿ
ದರ್ಶನ ಪರ ವಕೀಲರು ಕೌಂಟರ್ ಅಫಿಡವಿಟ್ ಸಲ್ಲಿಕೆಗೆ ಸಮಯವಕಾಶ ಕೇಳಿದ್ದು, ಸಾಕಷ್ಟು ಫೈಲ್‌ಗಳನ್ನು ತರ್ಜುಮೆ ಮಾಡಬೇಕಿದೆ. ಜೊತೆಗೆ ಎಲ್ಲ ಆರೋಪಗಳಿಗೆ ಉತ್ತರ ಸಲ್ಲಿಸಬೇಕಿದೆ. ಅದಕ್ಕಾಗಿ ಎರಡು ವಾರಗಳ ಕಾಲಾವಕಾಶ ಕೇಳಿದ್ದರು. ಹೀಗಾಗಿ ಏ.22 ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಇದಕ್ಕೂ ಮುನ್ನ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.
ನಟ ದರ್ಶನ್ 131 ದಿನಗಳ ಜೈಲುವಾಸದ ನಂತರ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಅ.30 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರ ಹೈಕೋರ್ಟ್ ಡಿ.13 ರಂದು ದರ್ಶನ್ ಮತ್ತು ಪ್ರಮುಖ ಆರೋಪಿ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್ – ಸುಪ್ರೀಂನಲ್ಲಿ ನಾಳೆ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ