ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 76ನೇ ಗಣರಾಜ್ಯೋತ್ಸವದ (Republic Day 2025) ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಮಾಣೆಕ್ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ ಸೇರಿ 1051 ಪೊಲೀಸರ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 114 ಪಿಎಸ್ಐ, 58 ಎಎಸ್ಐ, 80 ಸಿಬ್ಬಂದಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ಬಂದೋಬಸ್ತ್ಗೆ 10 ಕೆಎಸ್ಆರ್ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡನ್ನು ನಿಯೋಜನೆ ಮಾಡಲಾಗಿದೆ.
ಅಲ್ಲದೆ, ಮೈದಾನದ ಸುತ್ತ ಒಟ್ಟು 103 ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಕಲರ್ ಕೋಡ್ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಇದ್ದವರು ಗೇಟ್-2ರ ಮೂಲಕ ಪ್ರವೇಶಿಸಬಹುದು. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ. ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವ 2025 – ದೇಶದ ಜನತೆಗೆ ಶುಭಕೋರಿದ ಪ್ರಧಾನಿ, ಸಿಎಂ